ಬೆಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳಲ್ಲಿ ‘ಕಟ್ಟಡಗಳ ನಿರ್ಮಾಣ ಮತ್ತು ತೆರವು ತ್ಯಾಜ್ಯ ನಿರ್ವಹಣೆ-2016’ರ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಸ್ಥೆ (ನೀರಿ)ಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಮಂದಾರ ಪ್ರದೇಶಗಳಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾಗಿರುವ ಅನಾಹುತದ ವಿಚಾರವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಅವರು ವಾದಿಸಿ, ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಲ್ಲಿ ಕಟ್ಟಡ ನಿರ್ಮಾಣ ಮತ್ತು ತೆರವು ತ್ಯಾಜ್ಯ ನಿರ್ವಹಣೆ - 2016ರ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂದು ಪರಿಶೀಲಿಸಿ ವರದಿ ನೀಡುವುದರ ಜೊತೆಗೆ ಮುಂದೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಗಳನ್ನು ನೀಡಲು ನೀರಿ ಸಂಸ್ಥೆಯನ್ನು ನೇಮಕ ಮಾಡಲಾಗುವುದು. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯೇ ನೀರಿಯನ್ನು ನೇಮಕ ಮಾಡಿಕೊಳ್ಳಲಿದೆ ಎಂದು ಪೀಠಕ್ಕೆ ವಿವರಿಸಿದರು.
ಈ ಸುದ್ದಿಯನ್ನೂ ಓದಿ: ವನ್ಯಜೀವಿ ಮಂಡಳಿಗೆ ಅನರ್ಹರ ನೇಮಕ ಆರೋಪ: ನೇಮಕಾತಿ ಕಡತ ಕೇಳಿದ ಹೈಕೋರ್ಟ್
ಹೇಳಿಕೆ ದಾಖಲಿಸಿಕೊಂಡ ಪೀಠ, ಈ ಕುರಿತು ನೀರಿ ಸಂಸ್ಥೆಗೆ ಅಗತ್ಯ ಮನವಿ ಸಲ್ಲಿಸಲು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ ಸೂಚಿಸಿ, ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿತು. ಇದೇ ವೇಳೆ, ಘನತ್ಯಾಜ್ಯ ಭೂಭರ್ತಿ ಘಟಕದಿಂದ ಉಂಟಾದ ಅನಾಹುತದಿಂದ ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತರಿಗೆ ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ನೀಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವಂತೆಯೂ ಪೀಠ ಸೂಚಿಸಿತು.
ಮಂಗಳೂರು ಪಾಲಿಕೆ ಆಯುಕ್ತರೇ ಸ್ಮಾರ್ಟ್ ಸಿಟಿ ಯೋಜನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ನಿಭಾಯಿಸುತ್ತಿದ್ದಾರೆ. ಹೀಗಾಗಿ ಸ್ಮಾರ್ಟ್ ಸಿಟಿ ಯೋಜನೆಗೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಮನವಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು.