ಬೆಂಗಳೂರು: ಮಂಗಳೂರಿನ ನೆಹರೂ ಆಟದ ಮೈದಾನದಲ್ಲಿ ತರಕಾರಿ ಹಾಗೂ ಮಾಂಸದ ಮಾರುಕಟ್ಟೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್, ಮಹಾನಗರ ಪಾಲಿಕೆಗೆ ನೋಟಿಸ್ ಜಾರಿ ಮಾಡಿದೆ.
ಆಟದ ಮೈದಾನದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡುವುದನ್ನು ಪ್ರಶ್ನಿಸಿ ಸ್ಥಳೀಯ ನಿವಾಸಿಗಳಾದ ವಿಜಯ ಸುವರ್ಣ, ಮೊಹಮ್ಮದ್ ಹುಸೈನ್, ಅಂಥೋಣಿ ಸೆಬಾಸ್ಟಿಯನ್ ಫರ್ನಾಂಡಿಸ್ ಸೇರಿದಂತೆ 11 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಚ್, ಸುನೀಲ್ ಕುಮಾರ್ ವಾದ ಮಂಡಿಸಿ, ಮಂಗಳೂರು ನಗರದ ನೆಹರೂ ಸಾರ್ವಜನಿಕ ಮೈದಾನ 21 ಎಕರೆ ವಿಸ್ತೀರ್ಣ ಹೊಂದಿದೆ. ಈ ಮೈದಾನದಲ್ಲಿರುವ ಫುಟ್ಬಾಲ್ ಅಂಕಣದಲ್ಲಿ ಸ್ಥಳೀಯ ಮಹಾನಗರ ಪಾಲಿಕೆ ತರಕಾರಿ ಹಾಗೂ ಮಾಂಸದ ಮಾರುಕಟ್ಟೆ ನಿರ್ಮಿಸಲು ಮುಂದಾಗಿದೆ.
ಇದರಿಂದ ಸ್ಥಳೀಯರ ದಿನನಿತ್ಯದ ಆಟೋಟಗಳಿಗೆ, ಸಾರ್ವಜನಿಕರ ವಾಯು ವಿವಾಹರಕ್ಕೆ ತೊಂದರೆ ಆಗಲಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿದಾರರು ಮೇ 14ರಂದು ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ನ್ಯಾಯಾಲಯ ಮಧ್ಯಪ್ರವೇಶಿಸಿ ನೆಹರೂ ಮೈದಾನದ ಫುಟ್ಬಾಲ್ ಅಂಕಣದಲ್ಲಿ ತರಕಾರಿ ಮತ್ತು ಮಾಂಸ ಮಾರುಕಟ್ಟೆ ನಿರ್ಮಾಣ ಮಾಡದಂತೆ ಮತ್ತು ಆಟದ ಮೈದಾನವನ್ನು ಸಂರಕ್ಷಿಸುವಂತೆ ನಿರ್ದೇಶಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.