ಬೆಂಗಳೂರು : ಮಾಸ್ಕ್ ಹಾಗೂ ಸ್ಯಾನಿಟೈಸರ್ ಲಭ್ಯತೆ ಮತ್ತು ಇವುಗಳ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಕೊರೊನಾ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಲಭ್ಯವಿರುವ ಬಗ್ಗೆ ಸರ್ಕಾರದ ಪರ ವಕೀಲರು ಸ್ಪಷ್ಟ ಮಾಹಿತಿ ನೀಡದೇ ಇರುವುದಕ್ಕೆ ಪೀಠ ಅಸಮಾಧಾನ ವ್ಯಕ್ತಪಡಿಸಿತು.
ನಗರದಲ್ಲಿ ಪ್ರತಿ ದಿನ 2 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಪರಿಸ್ಥಿತಿ ಗಂಭೀರವಾಗಿದೆ. ಇಂತಹ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಮಾಸ್ಕ್, ಸ್ಯಾನಿಟೈಸರ್ ಲಭ್ಯತೆ ಎಷ್ಟಿದೆ ಎಂಬ ನಿಖರ ಮಾಹಿತಿಯನ್ನು ಇಟ್ಟುಕೊಂಡಿರಬೇಕು. ಆದರೆ ಸರ್ಕಾರ ಮಾರುಕಟ್ಟೆಯಲ್ಲಿ ಸಾಕಷ್ಟು ದಾಸ್ತಾನು ಇದೆ ಎಂದು ಉತ್ತರಿಸುತ್ತಿದೆ. ಹಾಗೆಯೇ ಮಾಸ್ಕ್ ಬೆಲೆ ನಿಯಂತ್ರಣದ ಬಗ್ಗೆಯೂ ಮಾಹಿತಿ ನೀಡಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ, ಈ ಕುರಿತು ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಹಿಂದಿನ ವಿಚಾರಣೆ ವೇಳೆ ಸ್ಯಾಟಿಟೈಸರ್ ಹಾಗೂ ಮಾಸ್ಕ್ಗಳ ಲಭ್ಯತೆ ಕುರಿತು ಮಾಹಿತಿ ನೀಡುವಂತೆ ಹಾಗೂ ಇವುಗಳ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಸಿಂಗಲ್ ಸವಾರರಿಗೆ ಮಾಸ್ಕ್ ವಿನಾಯಿತಿ ನೀಡಿಲ್ಲ
ವಿಚಾರಣೆ ವೇಳೆ ವಕೀಲ ಜಿ.ಆರ್ ಮೋಹನ್ ಪೀಠಕ್ಕೆ ಮಾಹಿತಿ ನೀಡಿ, ಮಾಧ್ಯಮಗಳಲ್ಲಿ ಕಾರು ಹಾಗೂ ಬೈಕ್ ಸವಾರರು ಒಬ್ಬರೇ ಇದ್ದಲ್ಲಿ ಮಾಸ್ಕ್ ಅಗತ್ಯವಿಲ್ಲ ಎಂದು ವರದಿ ಪ್ರಕಟವಾಗಿದೆ. ಬಿಬಿಎಂಪಿ ಆಯುಕ್ತರು ಮಾಧ್ಯಮಗಳಿಗೆ ಇಂತಹ ಮಾಹಿತಿ ನೀಡಿದ್ದಾರೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಬಿಬಿಎಂಪಿ ಪರ ವಕೀಲ ಶ್ರೀನಿಧಿ, ಮಾಧ್ಯಮಗಳಲ್ಲಿ ಆಯುಕ್ತರ ವರದಿಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು.
ಮಧ್ಯಪ್ರವೇಶಿಸಿದ ಪೀಠ, ಈ ಕುರಿತು ಸ್ಪಷ್ಟನೆ ನೀಡುವಂತೆ ಆಯುಕ್ತರಿಗೆ ನಿರ್ದೇಶಿಸಿತು. ಇದೇ ವೇಳೆ ಎನ್-95 ಮಾಸ್ಕ್ ಬಳಕೆ ಸೂಕ್ತವಲ್ಲ ಎಂದು ವಕೀಲೆ ಗೀತಾ ಮಿಶ್ರಾ ಸಲ್ಲಿರುವ ಮಧ್ಯಂತರ ಅರ್ಜಿಗೆ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡುವಂತೆಯೂ ಸೂಚಿಸಿತು.