ಬೆಂಗಳೂರು: ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಮುಂದುವರೆದಿರುವುದರಿಂದ 15 ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಮುಂದೂಡಿಕೆ ಮಾಡಿದ್ದು, ಎರಡು ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿ.ಟಿ ರವಿ, ಜಗದೀಶ್ ಶೆಟ್ಟರ್,ಆರ್.ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ವಿಸ್ತೃತ ಚರ್ಚೆ ನಡೆಸಲಾಯಿತು. ಅನರ್ಹರ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥವಾಗದೇ ಇರುವ ಕಾರಣಕ್ಕೆ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯದಂತೆ ದಕ್ಷಿಣ ಕರ್ನಾಟಕದ 8 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹುಬ್ಬಳ್ಳಿಯಲ್ಲಿ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಅಭ್ಯರ್ಥಿ ಆಯ್ಕೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತು.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಉಪ ಚುನಾವಣೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ ನಮ್ಮ ಸಂಘಟನೆಯಿಂದ ನಮ್ಮ ತಯಾರಿ ನಡೆದಿದೆ. ಅನರ್ಹರ ವಿಚಾರ ಸುಪ್ರೀಂಕೋರ್ಟ್ನಲ್ಲಿದ್ದು, ಅವರ ವಕೀಲರು ಚುನಾವಣೆ ಮುಂದೂಡಲು ವಾದ ಮಾಡಿದ್ದಾರೆ. ಆದ್ದರಿಂದ ಉಪ ಚುನಾವಣೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಪಕ್ಷ ಬಂದಿಲ್ಲ. ಆದರೆ, ತಯಾರಿ ಆರಂಭವಾಗಿದೆ ಎಂದರು.
ಚುನಾವಣೆ ನಡೆಯತ್ತಾ ಇಲ್ಲವಾ ಎನ್ನುವ ಅನಿಶ್ಚಿತತೆ ಇದೆ ಹೀಗಾಗಿ ಇಂದು ಅಭ್ಯರ್ಥಿ ಆಯ್ಕೆ ಮಾಡಿಲ್ಲ. ಈ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಅಭ್ಯರ್ಥಿ ಆಯ್ಕೆ ವಿಚಾರಕ್ಕೆ 27 ರಂದು ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟದ ಭಾಗದ 8 ಕ್ಷೇತ್ರಗಳ ಮುಖಂಡರ ಸಭೆ ಹಾಗೂ ಉತ್ತರ ಕರ್ನಾಟಕ ಭಾಗದ ಏಳು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ 29 ರಂದು ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಅನರ್ಹರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳ ವಿರೋಧ ಕುರಿತು ಪ್ರತಿಕ್ರಿಯೆ ನೀಡಿದ ಲಿಂಬಾವಳಿ, ಈಗಾಗಲೇ ಕೋರ್ಟ್ ನಲ್ಲಿ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಹಾಗಾಗಿ ನಾವು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿಲ್ಲ. ಚುನಾವಣೆ ನಡೆಯುವ ಬಗ್ಗೆಯೇ ಇಂದಿನ ವಿಚಾರಣೆಯಲ್ಲಿ ಸಂಶಯ ಬಂದಿದೆ. ಒಂದು ವೇಳೆ ಚುನಾವಣೆ ಬಂದರೆ ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ ಅದರಲ್ಲಿ ಸಂಶಯವಿಲ್ಲ ನಮ್ಮಲ್ಲಿ ಅಭ್ಯರ್ಥಿಗಳು ಇದ್ದಾರೆ ಎಂದರು.
ಇನ್ನು ಮೇಯರ್ ಚುನಾವಣೆ ಜೊತೆಯಲ್ಲಿ ವಿವಿಧ ಸ್ಥಾಯಿ ಸಮಿತಿ ಸಭೆಗಳಿಗೂ ಚುನಾವಣೆ ನಡೆಯಲಿದೆ. ಹಾಗಾಗಿ 30 ರಂದು ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದರು.