ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸೆಪ್ಟೆಂಬರ್ 30 ರಂದು ಆರೆಂಜ್ ಮತ್ತು ಅಕ್ಟೋಬರ್ 1, 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತವು ಕಡಿಮೆ ಒತ್ತಡದ ಪ್ರದೇಶಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳಲ್ಲಿ ಕ್ರಮೇಣ ಪಶ್ಚಿಮ - ವಾಯವ್ಯಕ್ಕೆ ಚಲಿಸಲಿದೆ. ಇದರ ಪರಿಣಾಮ ಮುಂದಿನ ಮೂರು ದಿನ ಉತ್ತರ ಒಳನಾಡಿನ ಜಿಲ್ಲೆಯಾದ ಕಲಬುರಗಿ ಜಿಲ್ಲೆಗೆ ಹಾಗೂ ನಾಳೆ, ನಾಡಿದ್ದು ಬೀದರ್, ವಿಜಯಪುರ ಜಿಲ್ಲೆಗೆ ಮತ್ತು ಅಕ್ಟೊಬರ್ 2 ರಂದು ಯಾದಗಿರಿ, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಮುಂದುವರೆದ ನೈರುತ್ಯ ಮುಂಗಾರು: ನಾಳೆ ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಎರಡು ದಿನ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ ಸೆ 30 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೈರುತ್ಯ ಮುಂಗಾರು ಚುರುಕು : ಸೆ.26 ರಂದು ನೈರುತ್ಯ ಮುಂಗಾರು ಚುರುಕಾಗಿದ್ದು, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೋ ಅಲರ್ಟ್ ಘೋಷಿಣೆ ಮಾಡಿತ್ತು. ಅಲ್ಲದೇ, ಸೆ.27 ರಂದು ನೈರುತ್ಯ ಮುಂಗಾರು ವೇಗ ಪಡೆದಿದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿಯ 3 ಜಿಲ್ಲೆ ಮತ್ತು ಉತ್ತರ ಒಳನಾಡಿನ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿತ್ತು.
ಮುಂದುವರೆದು ಅಕ್ಟೋಬರ್ 1ರವರೆಗೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಸೆ. 29 ರಂದು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರದಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿತ್ತು.
ಜೊತೆಗೆ ಸೆಪ್ಟೆಂಬರ್ 30 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಮತ್ತು ಅಕ್ಟೋಬರ್ 1 ರಂದು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : Rain in Karnataka: ಚುರುಕಾದ ನೈರುತ್ಯ ಮುಂಗಾರು.. ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್