ಬೆಂಗಳೂರು : ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ರಾಜ್ಯ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಇದು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಇದರಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಮಾಹಿತಿ ಒದಗಿಸುವಂತೆ ಸೂಚಿಸಿದರು.
ಸಭೆಯಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಶಾಂತಿ, ನಿರ್ಭೀತ ವಾತಾವರಣ ಸೃಷ್ಟಿಸಲು ಸೂಚನೆ : ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿವೆ. ಸಂಪೂರ್ಣವಾಗಿ ಅಪರಾಧ ಪ್ರಕರಣಗಳನ್ನು ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ನಗರದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಬೇಕು. ಸಮಾಜದ ಒಳಿತಿಗಾಗಿ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ತೀರ್ಮಾನ ಕೈಗೊಂಡು ಕಾರ್ಯಪ್ರವೃತ್ತರಾಗಬೇಕು. ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್ ಬೀಟ್ ವ್ಯವಸ್ಥೆ ಬಲಪಡಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಇದನ್ನೂ ಓದಿ : ಡಿ ಜೆ ಹಳ್ಳಿ ಪ್ರಕರಣದಲ್ಲಿ ಅಮಾಯಕರಿಗೆ ಅನ್ಯಾಯವಾಗಿದೆ, ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ: ಡಿಕೆಶಿ