ಬೆಂಗಳೂರು : ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನವನ್ನು ಕಡೆಗಣಿಸುವಂತೆಯೇ ಇಲ್ಲ. ವಿಜ್ಞಾನ ಕಲಿಕೆಗೆ ಸರಕಾರದಿಂದ ಹೆಚ್ಚು ಉತ್ತೇಜನ, ವೈಜ್ಞಾನಿಕ ಸಂಸ್ಕಾರಕ್ಕೆ ಒತ್ತು ನೀಡಲಾಗುವುದು. ಮೂಲ ವಿಜ್ಞಾನ ಕಲಿಕೆಗೆ ಹೆಚ್ಚು ಆದ್ಯತೆ ನೀಡುವುದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಹೆಚ್ಚು ಪೂರಕವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ತಿಳಿಸಿದರು.
ರಾಜ್ಯ ವಿಜ್ಞಾನ ಪರಿಷತ್ತು ಏರ್ಪಡಿಸಿದ್ದ 28ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ಹಾಗೂ ಬಾಲ ವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯಾವ ದೇಶ ವಿಜ್ಞಾನವನ್ನು ಉಪೇಕ್ಷಿಸುತ್ತದೆಯೋ ಆ ದೇಶ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚು ಒತ್ತಾಸೆ ಕೊಡಲಾಗಿದೆ. ಜತೆಗೆ, ವೈಜ್ಞಾನಿಕ ಸಂಶೋಧನೆಗೆ ಅತಿ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲೂ ಮೂಲ ವಿಜ್ಞಾನ ಬೋಧನೆ ಹಾಗೂ ಅದನ್ನು ಮತ್ತಷ್ಟು ವಿಸ್ತೃತವಾಗಿ ಕಲಿಸಲು ನೆರವಾಗುವಂತಹ ಎಲ್ಲ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಈಗಾಗಲೇ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದ್ದು, ಆ ಪರಂಪರೆಯನ್ನು ಮುಂದುವರಿಸಲು ಮತ್ತಷ್ಟು ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.