ಬೆಂಗಳೂರು : ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ ಕೆಲವು ಸಲಹೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮಮದ ಬಗ್ಗೆ ಚಿಂತನೆ ನಡೆಸಲಾಗುವುದು. ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಾಗಿದೆ. ಇದಕ್ಕೆ ಅವರು ಬಜೆಟ್ನಲ್ಲಿ ಅಥವಾ ಆ ನಂತರ ಸೂಕ್ತವಾಗಿ ಸ್ಪಂದಿಸುವ ಭರವಸೆ ಇದೆ ಎಂದು ಹೇಳಿದರು.

ಕಮಿಷನ್ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿ, ಆರ್ಥಿಕ ಇಲಾಖೆ ಜೊತೆ ಸಿಎಂ ಚರ್ಚೆ ಮಾಡಿ ನಿರ್ಧರಿಸುತ್ತಾರೆ. 23,247 ಕೋಟಿ ರೂ. ನಾವು ತೆರಿಗೆ ಸಂಗ್ರಹ ಮಾಡಿದ್ದೇವೆ. 25 ಸಾವಿರ ಕೋಟಿ ರೂ. ನಾವು ರೀಚ್ ಆಗುತ್ತಿದ್ದೇವೆ. ಕೋವಿಡ್ ಸಮಯದಲ್ಲೂ ನಮ್ಮ ಟಾರ್ಗೆಟ್ ರೀಚ್ ಆಗಿದ್ದೇವೆ. ಈ ವರ್ಷ ಟಾರ್ಗೆಟ್ ಮೀರಿ ತೆರಿಗೆ ಸಂಗ್ರಹವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಹಣಕಾಸು ಇಲಾಖೆ ಎಸಿಎಸ್ ಪ್ರಸಾದ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಅಬಕಾರಿ ಆಯುಕ್ತ ರವಿಶಂಕರ್ ಹಾಗೂ ಅಬಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತದ ತಟಸ್ಥ ನಿಲುವು ಸ್ವಾಗತಾರ್ಹ: ರಷ್ಯಾ