ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳ ಪರಾಮರ್ಶೆ, ರೈತ ಉತ್ಪಾದಕ ಸಂಸ್ಥೆಗಳ ಕಾರ್ಯಶೈಲಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪ್ರಗತಿ ಇತರ ವಿಷಯಗಳ ಬಗ್ಗೆ ರಾಷ್ಟ್ರೀಯ ಕೃಷಿ ಸಮ್ಮೇಳನದಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ಯಶವಂತಪುರದ ಖಾಸಗಿ ಹೋಟೆಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ರಾಜ್ಯಗಳ ಕೃಷಿ ಮತ್ತು ತೋಟಗಾರಿಕಾ ಸಚಿವರ ‘ರಾಷ್ಟ್ರೀಯ ಸಮ್ಮೇಳನ’ದಲ್ಲಿ ಭಾಗವಹಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಪರಾಮರ್ಶೆ ನಡೆಸಲಾಯಿತು.
10 ಸಾವಿರ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಒ)ಗಳನ್ನು ರಚಿಸಲು ಕೇಂದ್ರ ವಲಯದ ಯೋಜನೆಯಡಿ 1018 ಎಫ್‌ಪಿಒಗಳಿಗೆ 38 ಕೋಟಿ ರೂ.ಗೂ ಅಧಿಕ ಈಕ್ವಿಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, 3.21 ಲಕ್ಷಕ್ಕೂ ಅಧಿಕ ರೈತರಿಗೆ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
37 ಕೋಟಿ ರೈತರು ನೊಂದಾಯಿಸಿಕೊಂಡಿದ್ದಾರೆ: ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ. 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಕೈಗೊಳ್ಳಲಾಗಿದೆ. ಸಾವಯವ ಉತ್ಪನ್ನಗಳ ರಫ್ತಿಗೂ ಒತ್ತು ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 37 ಕೋಟಿ ರೈತರು ನೊಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.
ಯೋಜನೆಗಳು ಪಾರದರ್ಶಕವಾಗಿದ್ದು, ರೈತರನ್ನು ನೇರವಾಗಿ ತಲುಪಬೇಕು ಎಂಬುದು ನರೇಂದ್ರ ಮೋದಿಯವರ ಆಶಯವಾಗಿದೆ. ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೂ ಕೇಂದ್ರ ಆದ್ಯತೆ ನೀಡುತ್ತಿದ್ದು, ಶೀಥಲ ಕೇಂದ್ರ, ಗೋದಾಮುಗಳನ್ನು ನಿರ್ಮಿಸಲಾಗುತ್ತಿದೆ.
ಖಾದ್ಯತೈಲ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಗಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೃಷಿಯಲ್ಲಿ ಡ್ರೋನ್ ಬಳಕೆ ಮಾಡಲಾಗುತ್ತಿದೆ. ತೋಟಗಾರಿಕಾ ಬೆಳೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿವರಿಸಿದರು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಖಾದ್ಯ ತೈಲ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿ ಆಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಕೃಷಿ ಸಮ್ಮೇಳನದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ.
ಪ್ರಸ್ತುತ ನಾವು ಅಡುಗೆ ಎಣ್ಣೆಯನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತಿದ್ದು, ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ ಸಾಧಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ತಿಳಿಸಿದರು.
ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು: ರೈತರ ಆದಾಯ ದ್ವಿಗುಣಗೊಳಿಸುವ ಹಿನ್ನೆಲೆ ಹೊಸ ತಂತ್ರಜ್ಞಾನಗಳ ಅಳವಡಿಕೆ, ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಯಶೋಗಾಥೆಗಳ ಬಗ್ಗೆ ಸಮ್ಮೇಳನದಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ. ಬೆಳೆ ಸಮೀಕ್ಷೆ ಮಾಡುವುದರಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಇದನ್ನೂ ಬೇರೆ ರಾಜ್ಯಗಳ ಜೊತೆ ಹಂಚಿಕೊಳ್ಳಲಾಗಿದೆ. ಕೃಷಿಯಲ್ಲಿ ತಾಂತ್ರಿಕತೆ ಅಳವಡಿಕೆ, ಮಾರುಕಟ್ಟೆ ವಿಸ್ತರಣೆ ಮತ್ತಿತರ ಅಂಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು ಎಂದು ಹೇಳಿದರು.
2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಭಾತರ ಘೋಷಿಸಿದ್ದು, ವಿಶ್ವಸಂಸ್ಥೆಯಲ್ಲಿ 72 ದೇಶಗಳು ನಮ್ಮನ್ನು ಬೆಂಬಲಿಸಿವೆ. ಸಿರಿಧಾನ್ಯಗಳ ಉತ್ಪಾದನೆ, ಮಾರುಕಟ್ಟೆ, ರಫ್ತಿಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.