ಬೆಂಗಳೂರು: ಪಶು ಸಂಗೋಪಾನ ಸಚಿವರಾದ ಪ್ರಭು ಚೌಹಾಣ್ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಮಾತನಾಡಿದ ಸಚಿವರು, ಅತ್ಯಂತ ಹಳೆಯ ಇಲಾಖೆಯಲ್ಲಿ ಪಶು ಸಂಗೋಪನಾ ಇಲಾಖೆಯು ಒಂದಾಗಿದ್ದು, ಈ ಇಲಾಖೆಯಲ್ಲಿ ನಾನು ಕಾರ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ. ಜಿಲ್ಲೆಗಳಲ್ಲಿ ಇಲಾಖೆಯಿಂದ ಅನುಷ್ಠಾನವಾದ ಪ್ರತಿಯೊಂದು ಯೋಜನೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಗೈರಾದ ಅಧಿಕಾರಿಗಳಿಗೆ ನೋಟೀಸ್:
ಸಭೆಯಲ್ಲಿ ಪಾಲ್ಗೊಳ್ಳದ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿ ತೆಗೆದುಕೊಳ್ಳುವ ರೀತಿಯಲ್ಲಿ ಅಧಿಕಾರಿಗಳ ಹಾಜರಿಯನ್ನು ಖುದ್ದಾಗಿ ತೆಗೆದುಕೊಂಡರು. ಇದನ್ನು ಕಂಡು ಅಧಿಕಾರಿಗಳು ಕೆಲಕಾಲ ಗಲಿಬಿಲಿಗೊಂಡರು. ಇದೇ ವೇಳೆ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.
ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.