ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇರುವ ನೌಕರರ ರಾಜ್ಯ ವಿಮಾ ನಿಗಮದ (ಇಎಸ್ಐ) ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳ ಅವಶ್ಯಕತೆ ಪೂರೈಕೆಗೆ ಅನುವಾಗುವಂತೆ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದಿರಾ ನಗರದ 300 ಹಾಸಿಗೆಗಳ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಕೋವಿಡ್ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಪರಿಶೀಲನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಪ್ರಸ್ತುತ ಲಭ್ಯವಿರುವ ಸೌಕರ್ಯಗಳನ್ನು ಬಳಸಿಕೊಂಡು ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವಂತೆಯೂ ಹಾಗೂ ಅಗತ್ಯವಿರುವ ವೈದ್ಯಕೀಯ ವ್ಯವಸ್ಥೆ ಕುರಿತು ಸಮಿತಿಗಳ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಿದರು.
ಕೋವಿಡ್ ಜಾಗತಿಕ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯ ಔಷಧ ಖರೀದಿಗೆ ತೊಡಕಾಗಬಾರದು ಎಂದು ಖಡಕ್ ಸೂಚನೆ ನೀಡಿದ ಸಚಿವ ಶಿವರಾಂ ಹೆಬ್ಬಾರ್, ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಔಷಧ ಖರೀದಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿ ಇಎಸ್‌ಐ ಆಸ್ಪತ್ರೆ ರೋಗಿಗಳಿಗೆ ಶೀಘ್ರ ಔಷಧ ದೊರಕಿಸಲು ನೆರವಾಗುವಂತೆ ಔಷಧ ಖರೀದಿಗೆ ಸೂಕ್ತ ಅಧಿಕಾರವನ್ನು ನಿರ್ದೇಶಕರಿಗೆ ನೀಡಿರುವುದಾಗಿ ಪ್ರಕಟಿಸಿದರು. ಇಂದಿನ ಆದ್ಯತೆ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವುದಾಗಿದೆ. ರಾಜ್ಯ ಸರ್ಕಾರ ಇದಕ್ಕೆ ಅಗತ್ಯ ಕ್ರಮಗಳನ್ನು ವಹಿಸಲಿದೆ ಎಂದರು.
ಇಎಸ್‌ಐ ಆಸ್ಪತ್ರೆ ವೈದ್ಯರು ಮತ್ತು ದಾದಿಯರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಕೊರೊನಾ ಸಂದರ್ಭದಲ್ಲಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ರೋಗಿಗಳ ಆರೈಕೆಗೆ ಶ್ರಮಿಸುತ್ತಿದ್ದಾರೆ. ಎಲ್ಲರೂ ಎದೆಗುಂದದೆ ಕರ್ತವ್ಯ ನಿರ್ವಹಿಸಬೇಕು. ಸರ್ಕಾರ ತಮ್ಮೊಂದಿಗೆ ಇದೆ ಎಂದು ಆತ್ಮಸ್ಥೈರ್ಯ ತುಂಬಿದರು.
ಕಾರ್ಮಿಕರಿಗೆ ಸಹಾಯಧನ ತಲುಪಿಸಲು ಸೂಚನೆ:
ರಾಜ್ಯ ಸರ್ಕಾರ ಕೋವಿಡ್ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರಿಗೆ ಸಹಾಯಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ವಿಕಾಸಸೌಧದ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರ್ಕಾರ ಘೋಷಿಸಿರುವ ಸಹಾಯಧನ ಕಾರ್ಮಿಕರಿಗೆ ಸಮರ್ಪಕ ರೀತಿಯಲ್ಲಿ ಶೀಘ್ರವಾಗಿ ತಲುಪಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೋವಿಡ್ ಸಂಕಷ್ಟಕ್ಕೆ ತುತ್ತಾಗಿರುವ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಹಮ್ಮಿಕೊಳ್ಳಬಹುದಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.
ಕಾರ್ಮಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ಹಾಗೂ ಇಲಾಖೆಯ ಹಿರಿಯ ಮತ್ತು ಕಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಇದನ್ನೂ ಓದಿ: Gunturu accident ರಸ್ತೆ ಬದಿ ಗುಡಿಸಲಿಗೆ ಡಿಕ್ಕಿ ಹೊಡೆದ ಲಾರಿ... ಒಂದೇ ಕುಟುಂಬದ ನಾಲ್ವರು ಸಾವು