ಬೆಂಗಳೂರು: ಗಾರ್ಮೆಂಟ್ಸ್ಗಳಲ್ಲಿ ಮಹಿಳಾ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ನೀಡದೆ ಇರುವ 396 ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಬಿ.ಸಿ.ನಾಗೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಿಳಾ ಕಾರ್ಮಿಕರಿಗೆ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕನಿಷ್ಠ ನೀಡಬೇಕಾದ ಸೌಲಭ್ಯಗಳನ್ನು ನೀಡದಿರುವ ಹಿನ್ನೆಲೆ ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಕುಡಿಯುವ ನೀರು, ಶೌಚಾಲಯ, ಕುಳಿತು ಕೆಲಸ ಮಾಡಲು ಆಸನದ ವ್ಯವಸ್ಥೆ, ಗಾಳಿ, ಬೆಳಕು, ತುರ್ತು ನಿರ್ಗಮನ, ಪ್ರಥಮ ಚಿಕಿತ್ಸೆ ಸೌಲಭ್ಯ, 6 ವರ್ಷದ ಮಕ್ಕಳಿಗೆ ಬಾಲವಾಡಿ, ವಿಶ್ರಾಂತಿ ಕೊಠಡಿ, ಕ್ಯಾಂಟೀನ್ ಸೌಲಭ್ಯ, ಆ್ಯಂಬುಲೆನ್ಸ್, ಕಲ್ಯಾಣಕಾರಿ, ಸುರಕ್ಷತಾ ಅಕಾರಿ, ವೇತನ ಸಹಿತ ರಜೆ ಸೇರಿದಂತೆ ಹಲವು ರೀತಿಯ ನಿಯಮಗಳಿವೆ.
ಮಹಿಳೆಯರಿಗೆ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಸುರಕ್ಷತೆ ಒದಗಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಿ ವಿಧಾನ ಮಂಡಲದಲ್ಲಿ ಅಂಗೀಕರಿಸಲಾಗಿದೆ. ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು. ಕಾರ್ಮಿಕ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‍ಸಿಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟರೆ ಆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.