ಬೆಂಗಳೂರು: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜರಾಜೇಶ್ವರಿ ವಲಯದ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಕೋವಿಡ್-19 ಝೋನಲ್ ಕಮಾಂಡರ್ ಸೆಂಟರ್ ಸೇರಿದಂತೆ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಬೆಳಗ್ಗೆ ರಾಜರಾಜೇಶ್ವರಿ ನಗರದ ಕೋವಿಡ್-19 ಝೋನಲ್ ಕಮಾಂಡರ್ ಸೆಂಟರ್ಗೆ ಭೇಟಿ ನೀಡಿದ ಸಚಿವರು, ಅಲ್ಲಿ ಯಾವ ರೀತಿ ನಿರ್ವಹಣೆ ಮಾಡಲಾಗುತ್ತಿದೆ, ಸರ್ಕಾರದಿಂದ ನಿಯೋಜನೆಗೊಂಡಿರುವ ತಹಶೀಲ್ದಾರ್, ಎಸಿಗಳು ಹಾಗೂ ಸಿಬ್ಬಂದಿ ವರ್ಗ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ, ಹಾಸಿಗೆ ಸೌಲಭ್ಯ ಸಮರ್ಪಕವಾಗಿದೆಯೇ? ಸೋಂಕು ಪತ್ತೆಯಾದವರ ಪ್ರಾಥಮಿಕ ಸಂಪರ್ಕಿತರಿಗೆ ಯಾವ ವ್ಯವಸ್ಥೆ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಹೊಸದಾಗಿ ನಿರ್ಮಾಣ ಮಾಡಲಾದ 450 ಹಾಸಿಗೆಯುಳ್ಳ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಎಷ್ಟು ಮಂದಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ, ತುರ್ತು ಪರಿಸ್ಥಿತಿಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತದೆ, ಅದಕ್ಕಾಗಿ ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂಬಿತ್ಯಾದಿ ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಂಡರು.
ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದ್ದು, ಇನ್ನುಮುಂದೆ ಇಂತಹ ದೂರುಗಳು ನನಗೆ ಬರಕೂಡದು. ಆ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿ, ಅದನ್ನು ನೂರಕ್ಕೆ ನೂರರಷ್ಟು ಬಗೆಹರಿಸಿಕೊಡುತ್ತೇನೆ ಎಂದು ಸಚಿವರು ಅಭಯ ನೀಡಿದರು.
ಇನ್ನು ರಾಜರಾಜೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯರು ಹಾಗೂ ನರ್ಸ್ ಗಳ ಬಳಿ ಸಮಾಲೋಚನೆ ನಡೆಸಿ ಸಲಹೆ-ಸೂಚನೆಗಳನ್ನು ನೀಡಿದರು.
ಕೋವಿಡ್ ನಿಯಂತ್ರಣದಲ್ಲಿ ನಮ್ಮ ವೈದ್ಯರು ಹಾಗೂ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಸಾರ್ವಜನಿಕರು ಭಯ ಪಡುವುದು ಬೇಡ, ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸೋಮಶೇಖರ್ ತಿಳಿಸಿದರು. ಈ ವೇಳೆ ರಾಜರಾಜೇಶ್ವರಿ ನಗರ ವಲಯದ ಜೆಸಿ ಜಗದೀಶ್, ಎಸಿ ಶಿವಣ್ಣ ಸೇರಿದಂತೆ ಇತರೆ ಅಧಿಕಾರಿಗಳು ಜೊತೆಗಿದ್ದರು.