ಬೆಂಗಳೂರು: ಕೋವಿಡ್ ನಿರ್ವಹಣೆ ಬಗ್ಗೆ ವದಂತಿ, ತಪ್ಪು ಸಂದೇಶ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಹಾಗು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಕರ್ನಾಟಕ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ - 2020ರ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣ, ಪರೀಕ್ಷೆ ಮೊದಲಾದ ವ್ಯವಸ್ಥೆಯಲ್ಲಿ ಯಾವುದೇ ತಪ್ಪು ಕಂಡುಬಂದರೆ ಪುರಾವೆಸಹಿತ ಸರ್ಕಾರಕ್ಕೆ ದೂರು ನೀಡಬೇಕಿತ್ತು. ಅದರ ಬದಲು ರಾಜಕೀಯ ಲಾಭಕ್ಕಾಗಿ ಬೇಜವಾಬ್ದಾರಿಯಿಂದ ತಪ್ಪು ಸಂದೇಶ/ವದಂತಿ ಹರಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಹೇಳಿಕೆ ಮೂಲಕ ಸಚಿವರು ತಿಳಿಸಿದ್ದಾರೆ .
ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚು ಮಾಡಿ ಸರ್ಕಾರ ಹಣ ಸಂಪಾದಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ. ಅಲ್ಲದೆ, ಸರ್ಕಾರವೇ ಕೋವಿಡ್ ಪಾಸಿಟಿವ್ ಎಂದು ತಮ್ಮನ್ನು ಬಿಂಬಿಸಲು ಯತ್ನಿಸಿದೆ ಎಂದು ಆರೋಪಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹಿಡಿದು ಪಾಸಿಟಿವ್ ಎಂದು ತೋರಿಸಲಾಗುತ್ತಿದೆ ಎಂದೂ ಹೇಳಿಕೆ ನೀಡಿದ್ದಾರೆ.
ಜೊತೆಗೆ, ಪಾದಯಾತ್ರೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ಮಾಡಿ ಸುಳ್ಳಾದ ಫಲಿತಾಂಶವನ್ನು ತೋರಿಸಲು ಸಾಧ್ಯವಿಲ್ಲ. ಆದರೆ ಈ ಬಗ್ಗೆಯೂ ಸುಳ್ಳು ಆರೋಪ ಮಾಡಲಾಗಿದೆ. ಈ ರೀತಿ ಆಧಾರರಹಿತ ಆರೋಪ, ವದಂತಿಗಳನ್ನು ಹರಡಿದ್ದು, ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
"ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್, ಗೃಹ ಸಚಿವರು ಹಾಗೂ ನನ್ನನ್ನು ವೈಯಕ್ತಿಕವಾಗಿ ನಿಂದಿಸಿರುವುದನ್ನು ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ. ಆದರೆ ಆರೋಗ್ಯ ತುರ್ತು ಪರಿಸ್ಥಿತಿ ಇರುವ ಸಂದರ್ಭದಲ್ಲಿ ವೈದ್ಯಕೀಯ ವಿಚಾರದಲ್ಲಿ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರು ತಪ್ಪು ಮಾಹಿತಿ, ವದಂತಿ ಹರಡಿರುವುದು ಹಾಗೂ ದೇಶದ ಗೌರವಕ್ಕೆ ಧಕ್ಕೆ ತರುವಂತೆ ನೀಡಿದ ಹೇಳಿಕೆಗಳಿಗೆ ಪುರಾವೆ ಒದಗಿಸಬೇಕು. ಇಲ್ಲದಿದ್ದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ತಪ್ಪು ಸಂದೇಶ ಹರಡಿರುವುದರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಆಗ್ರಹಿಸಿದ್ದಾರೆ.
ಕಾನೂನಿನ ಅಂಶಗಳು ಹೀಗಿವೆ..:
ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ-1897 ನ ಸೆಕ್ಷನ್ 2, 3 ಹಾಗೂ 4 ರಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವ ಆದೇಶ ಹೊರಡಿಸಬಹುದು. 2020 ರ ಮಾರ್ಚ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ರೀತಿಯ ತಾತ್ಕಾಲಿಕ ಆದೇಶ ಹೊರಡಿಸಿ ವದಂತಿಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿತ್ತು.
ಭಾರತೀಯ ದಂಡ ಸಂಹಿತೆ (ಐಪಿಸಿ)- 1860 ರಲ್ಲೂ ಸಾರ್ವಜನಿಕರಿಗೆ ಆತಂಕ ಉಂಟುಮಾಡುವ ಹೇಳಿಕೆ, ವದಂತಿ, ವರದಿಗಳನ್ನು ಹರಡಿದರೆ ಶಿಕ್ಷೆ ವಿಧಿಸುವ ಅವಕಾಶವಿದೆ. ಐಟಿ ಕಾಯ್ದೆಯಲ್ಲೂ ಈ ಬಗೆಯ ಕಠಿಣ ಕ್ರಮ ಕೈಗೊಳ್ಳಬಹುದಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ-2005 ರಲ್ಲಿ, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಲು ತಪ್ಪು ಎಚ್ಚರಿಕೆ ಸಂದೇಶಗಳನ್ನು ಹರಡಿದರೆ ಕಠಿಣ ಕಾನೂನು ಕ್ರಮವನ್ನು ಸರ್ಕಾರ ಕೈಗೊಳ್ಳಬಹುದಾಗಿದೆ.
ಕರ್ತವ್ಯಕ್ಕೆ ಅಡ್ಡಿ:
ಕರ್ನಾಟಕ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ-2020 ರ ಸೆಕ್ಷನ್ 5 ರಲ್ಲಿ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಶಾಸಕ ಡಿ.ಕೆ.ಶಿವಕುಮಾರ್ ಅವರ ಬಳಿ ಬಂದಿದ್ದ ರಾಮನಗರ ಜಿಲ್ಲೆಯ ಅಧಿಕಾರಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದರು. ಆದರೆ ಪರೀಕ್ಷೆ ಮಾಡಲು ಡಿ.ಕೆ.ಶಿವಕುಮಾರ್ ಅವರು ಅವಕಾಶ ನೀಡದೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ತಿಳಿದುಬಂದಿದೆ. ಆದ್ದರಿಂದ ಈ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಅವಕಾಶವೂ ಇದೆ.
ಕೋವಿಡ್ ನಿರ್ವಹಣೆಯ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳು ಕಂಡುಬಂದರೆ ಅದರ ಬಗ್ಗೆ ಸರ್ಕಾರಕ್ಕೆ ತಿಳಿಸಬಹುದು. ಆದರೆ ಜನರಲ್ಲಿ ಆತಂಕ ಉಂಟುಮಾಡುವ ಉದ್ದೇಶ ಹಾಗೂ ರಾಜಕೀಯ ಲೆಕ್ಕಾಚಾರಕ್ಕಾಗಿ ಜನರಲ್ಲಿ ಭಯ ಹುಟ್ಟಿಸಲು ಯತ್ನಿಸಿದರೆ ಅದು ಕಾನೂನು ಉಲ್ಲಂಘನೆಯಾಗುತ್ತದೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಈ ಸಮಯದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಜನರ ಆರೋಗ್ಯವನ್ನು ಸುರಕ್ಷಿತವಾಗಿಸಲು ಯತ್ನಿಸುತ್ತದೆ. ಇಂತಹ ಸಮಯದಲ್ಲಿ ಈ ರೀತಿ ವದಂತಿ ಹಬ್ಬಿಸುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಆರೋಪ ಮಾಡಿದವರು ಕೂಡಲೇ ಸಾಕ್ಷಿ ಸಮೇತ ಹೇಳಿಕೆಗಳಿಗೆ ಸ್ಪಷ್ಟನೆ ಒದಗಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಜಾರಿಯಾಗಲಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಘನತೆಗೆ ಧಕ್ಕೆ:
ಎಲ್ಲಾ ದೇಶಗಳಲ್ಲಿ ಆಡಳಿತ ಪಕ್ಷದೊಂದಿಗೆ ವಿರೋಧ ಪಕ್ಷಗಳು ಕಾರ್ಯನಿರ್ವಹಿಸಿ ಕೊರೊನಾ ನಿಯಂತ್ರಿಸಲು ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ, ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರದ ನೀತಿಯ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ರಾಷ್ಟ್ರ ಮಟ್ಟಡಲಾಲಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತಿದೆ. ಇದರಿಂದ ರಾಜ್ಯದ ಘನತೆಗೆ ಧಕ್ಕೆ ಉಂಟಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.