ಬೆಂಗಳೂರು: ನವಜಾತ ಶಿಶುವಿಗೂ ಸೇರಿ ಎಲ್ಲರೂ ಮಾನಸಿಕ ಆರೋಗ್ಯದ ತಪಾಸಣೆ ಮಾಡಿಸಿಕೊಂಡು ರೋಗ ಪತ್ತೆ ಮಾಡಿಕೊಳ್ಳುವ ಅಗತ್ಯವಿದೆ. ಸಾಮಾಜಿಕ ಪರಿಸ್ಥಿತಿ, ಕೌಟುಂಬಿಕ ಸ್ಥಿತಿ ಮೊದಲಾದ ಕಾರಣಗಳಿಂದ ಅನೇಕರು ಮಾನಸಿಕ ಒತ್ತಡದಿಂದ ಬಳಲುತ್ತಾರೆ. ಇದು ಪ್ರತಿದಿನದ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ, ಹೆಚ್ಚು ಮಾನಸಿಕ ಆರೋಗ್ಯ ತಜ್ಞರು ರಾಜ್ಯಕ್ಕೆ ಬೇಕಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ದೇಶದಲ್ಲೇ ಮೊದಲ ಬಾರಿಗೆ ನಿಮ್ಹಾನ್ಸ್ ಸಂಸ್ಥೆಯು ನೀತಿ ಆಯೋಗ ಹಾಗು ಆರೋಗ್ಯ ಇಲಾಖೆಯ ನೆರವಿನಲ್ಲಿ 'ಕರ್ನಾಟಕ ಮೆದುಳು ಆರೋಗ್ಯ ಕಾರ್ಯಕ್ರಮ' (ಕರ್ನಾಟಕ ಬ್ರೇನ್ ಹೆಲ್ತ್ ಇನೀಶಿಯೇಟಿವ್) ಜಾರಿ ಮಾಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಚಾಲನೆ ನೀಡಿದರು.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಮ್ಹಾನ್ಸ್ನಿಂದ ಈ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದು, ಮಾನಸಿಕ ರೋಗಗಳ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುವ ಕುರಿತು ವೈದ್ಯರಿಗೆ ತರಬೇತಿ ಮತ್ತು ರೋಗಿಗಳನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್, ಕೋವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ ಅನೇಕ ಕೋವಿಡ್ ರೋಗಿ ಹಾಗು ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರೆಸಲಾಗುತ್ತಿದೆ.
ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್, ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದರು.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಅಭಿಪ್ರಾಯಪಟ್ಟರು.
ಕೋವಿಡ್ ಸಂಬಂಧಿತ ಆಸ್ಪತ್ರೆ ದಾಖಲಾತಿ ಕಡಿಮೆ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಳೆದ ವಾರ ಶೇ. 22 ರಷ್ಟು ಇದ್ದು, ಈ ವಾರ ಶೇ. 32 ಕ್ಕೆ ತಲುಪಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 3,442, ಖಾಸಗಿ ಆಸ್ಪತ್ರೆಗಳಲ್ಲಿ 1,788 ಸೇರಿ ಒಟ್ಟು 5,230 ರೋಗಿಗಳು ದಾಖಲಾಗಿದ್ದಾರೆ.
3.62 ಲಕ್ಷ ಸಕ್ರಿಯ ಪ್ರಕರಣಗಳಲ್ಲಿ ಶೇ. 2 ಕ್ಕಿಂತ ಕಡಿಮೆ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ದರಿಂದ, ಈ ರೋಗ ತೀವ್ರವಾಗಿ ಪರಿಣಾಮ ಬೀರಿಲ್ಲ. ಐದಾರು ದಿನಗಳೊಳಗೆ ಲಕ್ಷಣಗಳು ಕಡಿಮೆಯಾಗುತ್ತವೆ. ಆದ್ದರಿಂದ, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಆದರೂ ಎಚ್ಚರಿಕೆ ಕ್ರಮಗಳನ್ನು ಅನುರಿಸಬೇಕು ಎಂದರು.
ಫೆಬ್ರವರಿಯಲ್ಲಿ ಮೂರನೇಯ ಅಲೆ ಕಡಿಮೆಯಾಗಲಿದೆ
ಫೆಬ್ರವರಿ ಎರಡು, ಮೂರನೇ ವಾರದಲ್ಲಿ ಮೂರನೇ ಅಲೆ ಕಡಿಮೆಯಾಗಲಿದೆ ಎಂದು ಐಸಿಎಂಆರ್ ಕೂಡ ಹೇಳಿದೆ. ಹೆಚ್ಚು ಎಚ್ಚರ ವಹಿಸಿದರೆ 3ನೇ ಅಲೆ ನಿಯಂತ್ರಣಕ್ಕೆ ತರಬಹುದು. ರಾಜ್ಯದಲ್ಲಿ ಮೊದಲ ಡೋಸ್ ಶೇ. 100 ರಷ್ಟು ಹಾಗು 2ನೇ ಡೋಸ್ ಶೇ. 84 ರಷ್ಟು ಪೂರ್ಣಗೊಂಡಿದೆ. ಆದ್ದರಿಂದ, ಜನರಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಬೆಳೆದಿದೆ ಎಂದು ಹೇಳಿದರು.
ವಿಷನ್ ವರದಿ: ಆರೋಗ್ಯ ಇಲಾಖೆಯಿಂದ ವಿಷನ್ ವರದಿ ರೂಪಿಸಲಾಗುತ್ತಿದೆ. ಮುಂದಿನ 20 ವರ್ಷಗಳಲ್ಲಿ ಕರ್ನಾಟಕ ಹೇಗೆ ಸ್ವಾಸ್ಥ್ಯ ರಾಜ್ಯವಾಗಬೇಕು ಹಾಗೂ ಮೂರು ಹಂತಗಳ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಹೇಗಾಗಬೇಕೆಂದು ವರದಿ ರೂಪಿಸಲಾಗುತ್ತಿದೆ. ವರದಿ ರೂಪಿಸುವ ಸಮಿತಿಯಲ್ಲಿ 30 ಹಿರಿಯ ತಜ್ಞರಿದ್ದಾರೆ. ಕಳೆದೊಂದು ವರ್ಷದಲ್ಲಿ ಸುಮಾರು 750 ತಜ್ಞರು ಇದನ್ನು ರೂಪಿಸಲು ಭಾಗಿಯಾಗಿದ್ದಾರೆ. ಜನವರಿ 28 ಕ್ಕೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಆರು ತಿಂಗಳಾಗುತ್ತದೆ. ಆ ವೇಳೆ ಅವರು ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಉತ್ತಮ ಬಜೆಟ್: ಕೇಂದ್ರ ಬಜೆಟ್ನ ಬಗ್ಗೆ ಜನರಿಗೆ ದೊಡ್ಡ ನಿರೀಕ್ಷೆ ಇದೆ. ದೇಶದ ಆರ್ಥಿಕತೆಯನ್ನು ಕೋವಿಡ್ ಪೂರ್ವ ಹಾಗೂ ಕೋವಿಡ್ ನಂತರದ ಕಾಲ ಎಂದು ವಿಂಗಡಿಸಬಹುದು. ಕೋವಿಡ್ ನಂತರದ ಈ ಕಾಲದಲ್ಲಿ ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಉತ್ತಮ ಬಜೆಟ್ ನೀಡುವ ವಿಶ್ವಾಸವಿದೆ ಎಂದರು.
ಓದಿ: ಸಹಕಾರ ನಿಬಂಧಕರ ನೋಟಿಸ್ ಪ್ರಶ್ನಿಸಿ ಅರ್ಜಿ ಸಲ್ಲಿಕೆ: ಹೈಕೋರ್ಟ್ನಿಂದ ವಜಾ