ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮಾಡುತ್ತಿದ್ದು, ಇಂದು ಸಹ ಹೊಸ ಆದೇಶ ಹೊರಬಿದ್ದಿದೆ.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ಗೂಳಿಹಟ್ಟಿ ಶೇಖರ್ ನೇಮಕ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಗೂಳಿಹಟ್ಟಿ ಶೇಖರ್ಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದ್ದಾರೆ.
ಇತ್ತೀಚೆಗಷ್ಟೇ ಕೆಲ ನಿಗಮ ಮಂಡಳಿಗಳ ಅಧ್ಯಕ್ಷರ ಅವಧಿ ಮುಗಿಯುವ ಮುನ್ನವೇ ವಿಸರ್ಜಿಸಿದ್ದ ಸರ್ಕಾರ ಒಂದೆರಡು ತಿಂಗಳು ಮೌನವಹಿಸಿತ್ತು. ಕಳೆದ ವಾರವಷ್ಟೇ ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಆರಂಭವಾಗಲಿದ್ದು, ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನೇಮಕ ಆಗಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದವು.
ಇದಾದ ಬಳಿಕ ರಾಜ್ಯ ಸರ್ಕಾರ ಕಳೆದ ನ.6ರಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಮತ್ತು ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಅವರನ್ನು ನೇಮಿಸಿ ಆದೇಶ ಹೊರಡಿಸಿತ್ತು. ಇಂದು ಇನ್ನೊಂದು ಆದೇಶ ಹೊರ ಬಿದ್ದಿದ್ದು, ಒಂದೆರಡು ದಿನಗಳಲ್ಲಿಯೇ ಇನ್ನು 10 ರಿಂದ 12 ನಿಗಮ ಮಂಡಳಿಗಳ ಅಧ್ಯಕ್ಷರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಲಿದೆ ಎಂಬ ಮಾಹಿತಿ ಇದೆ.
ಇದನ್ನೂ ಓದಿ: ಸರ್ಕಾರಿ ನೌಕರರ 7ನೇ ವೇತನ ಆಯೋಗದ ನಿರೀಕ್ಷೆಗಳೇನು?