ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾನೂನು ಸೇರಿ ರಾಜ್ಯ, ಕೇಂದ್ರ ಸರ್ಕಾರಗಳ ನೀತಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರು ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆ ವೇಳೆ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಬಲ ಪ್ರದರ್ಶನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೃಷಿ ಹಾಗೂ ಕಾರ್ಮಿಕ ನೀತಿ ವಿರೋಧಿಸಿ ಇಂದು ಬೆಳಗ್ಗೆ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್ಗೆ ಬಂದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ರೈತರು, ಬೃಹತ್ ಸಮಾವೇಶ ನಡೆಸಿದರು.
ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾ ಮೆರವಣಿಗೆ ಮೂಲಕ ತೆರಳುತ್ತಿದ್ದ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರ ಮೆರವಣಿಗೆ ಜಾಥಾವನ್ನು ಫ್ರೀಡಂಪಾರ್ಕ್ ಬಳಿ ತಡೆದು ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನು ಓದಿ: ಕಾಂಗ್ರೆಸ್ ‘ರಾಜಭವನ ಚಲೋ’ಗೆ ತಡೆ: ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ
ಈ ವೇಳೆ ಶಾಸಕಿ ಸೌಮ್ಯರೆಡ್ಡಿ ಹಾಗೂ ಮಹಿಳಾ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಸೌಮ್ಯ ರೆಡ್ಡಿ ಬಲ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ನಂತರ ಶಾಸಕಿ ಸೌಮ್ಯರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.