ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಇಂದು ಬೆಳಗ್ಗೆ ಬಿಡಿಎ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದಿನಿಂದಲೇ ಕರ್ತವ್ಯ ಆರಂಭಿಸಿದ್ದಾರೆ.
ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮವಿದೆ. ಎರಡೆರಡು ಹುದ್ದೆಯಲ್ಲಿ ಮುಂದುವರೆಯುವಂತಿಲ್ಲ. ಈ ಹಿನ್ನೆಲೆ ಪಕ್ಷದ ನಿಯಮದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ಸಲ್ಲಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ತಮ್ಮೊಂದಿಗೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು. ಈಗ ನನಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬೆಂಗಳೂರು ನಾಗರಿಕರಿಗೆ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿರುವ ಹಿನ್ನೆಲೆ ನಾನು ಈ ದಿನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿರುತ್ತೇನೆ ಎಂದು ಉಲ್ಲೇಖಿಸಿ ರಾಜೀನಾಮೆ ಪತ್ರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸಲ್ಲಿಸಿದ್ದಾರೆ.