ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕಟೀಲ್, ಸ್ವಚ್ಛ ಭಾರತ, ಗ್ರಾಮ ಸಡಕ್‌ನಂತಹ ಉತ್ತಮ ಯೋಜನೆಗಳ ಅನುಷ್ಠಾನದ ಮೂಲಕ ಈಗಿನ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಂಡಿದೆ. ಅಲ್ಲದೇ ಸ್ವಾಮಿ ವಿವೇಕಾನಂದರ "ಭಾರತ ವಿಶ್ವಗುರು" ಎಂಬ ಮಹಾನ್ ಪರಿಕಲ್ಪನೆ ಜಾರಿಗೊಳಿಸಲು ಶ್ರಮಿಸುತ್ತಿದೆ ಎಂದರು.
ದೇಶಕ್ಕಾಗಿ ವಾರದ ಎಲ್ಲಾ ದಿನಗಳಲ್ಲಿ ಒಂದು ಹೊತ್ತಿನ ಊಟ ಬಿಡಿ ಎಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಕರೆ ನೀಡಿದ್ದರು. ಅವರು ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಹೊಂದಿದ್ದರು. 70 ವರ್ಷ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಗಾಂಧೀಜಿ ಚಿಂತನೆ ಮತ್ತು ಆದರ್ಶಗಳನ್ನು ಅಳವಡಿಸಿಕೊಂಡಿರಲಿಲ್ಲ. ಆದ್ದರಿಂದ ಕಾಂಗ್ರೆಸ್‌ಗೆ ಗಾಂಧೀಜಿ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಕಟೀಲ್ ಟೀಕಿಸಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷರ ನಿರ್ಮಲ್ ಕುಮಾರ್ ಸುರಾನಾ, ಸಂಸದ ಪ್ರತಾಪ ಸಿಂಹ, ರಾಜ್ಯ ಪ್ರ. ಕಾರ್ಯದರ್ಶಿಗಳಾದ ಮಹೇಶ್ ತೆಂಗಿನಕಾಯಿ, ಸಿದ್ದರಾಜು, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ಸಂದೀಪ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.