ದೇವನಹಳ್ಳಿ: ಇಂದು ಬೆಂಗಳೂರಿಗೆ ಆಗಮಿಸಿದ ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ವೇಳೆ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಕಾಂಗ್ರಸ್ ಕಾರ್ಯಕರ್ತರು ಡಿಕೆಶಿ ಅವರಿಗೆ ಸಾಥ್ ನೀಡಿದರು.
ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೇವಾಲಾ ಆಯ್ಕೆಯಾಗಿದ್ದು, ಇಂದು ಅಧಿಕಾರವಹಿಸಿಕೊಳ್ಳಲಿದ್ದಾರೆ. ಈ ವೇಳೆ ಮಾತನಾಡಿದ ರಂದೀಪ್ ಸುರ್ಜೇವಾಲಾ, ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ರೈತ ವಿರೋಧಿಯಾಗಿದೆ. ರೈತರ ಮರಣ ಶಾಸನವಾಗಿರುವ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿವೆ. ಈ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಪರವಾಗಿವೆ. ಕಾಂಗ್ರೆಸ್ ರೈತರ ಪರವಾಗಿದ್ದು, ನಾವು ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸುತ್ತೇವೆ ಎಂದು ಹೇಳಿದರು.
ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷ ಯಾವಾಗಲೂ ರೈತರ ಪರ ಇರಲಿದೆ. ಕರ್ನಾಟಕದಲ್ಲಿ ಮಾತ್ರ ಅಲ್ಲ ದೇಶಾದ್ಯಂತ ರೈತರ ಪ್ರತಿಭಟನೆಗೆ ಸಹಕಾರ ನೀಡಲು ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ನಾಳಿನ ಬಂದ್ ಬಗ್ಗೆ ಪ್ರತಿಕ್ರಿಯಿಸಿದ್ರು. ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಮಾತ್ರ ಬೆಂಬಲ ಸೂಚಿಸಲು ಆಗುವುದಿಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಅವರೇ ತೀರ್ಮಾನ ಮಾಡಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.
ಈ ಬಗ್ಗೆ ಸದನದಲ್ಲಿ ಸವಾಲು, ಪ್ರತಿಸವಾಲು ಎರಡೂ ಬಂದಿವೆ. ಈ ಬಗ್ಗೆ ನಾವು ಕೂತು ಚರ್ಚೆ ನಡೆಸಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.