ಬೆಂಗಳೂರು: ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದು, ಅಂಗನವಾಡಿ ಮತ್ತು ಶಾಲಾ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಸಲ್ಲಿಸಿದ ಸಮೀಕ್ಷೆ ವರದಿಯಲ್ಲಿ ತಿಳಿಸಿದೆ. 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ಹೊರಗುಳಿದಿರುವ ಬಗ್ಗೆ ಹೈಕೋರ್ಟ್ದಾಖಲಿಸಿಕೊಂಡಿರುವ ಸುಮೊಟೊ ಸಾರ್ವಜನಿಕ ಅರ್ಜಿ ವಿಚಾರಣೆಯನ್ನು ಬುಧವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ವಿಭಾಗೀಯ ಪೀಠವು ನಡೆಸಿತು. ಈ ಸಂದರ್ಭದಲ್ಲಿ ಪ್ರಕರಣದ ಅಮೆಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಫಣೀಂದ್ರ ಅವರು ಸಮೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಸಮೀಕ್ಷಾ ವರದಿ ಗಮನಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳು, ಶಾಲಾ ಕಲಿಕೆ ಮತ್ತು ವಿಶೇಷವಾಗಿ ಅಂಗನವಾಡಿಯಿಂದ ಹೊರಗುಳಿದಿರುವ 3ರಿಂದ 6 ವರ್ಷದೊಳಗಿನ ಮಕ್ಕಳನ್ನು ವಾಪಸ್ ಕಲಿಕೆಗೆ ಕರೆತರಲು ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ಇದೇ 16ರಂದು ಸಭೆ ನಡೆಸಿ ಸಲಹೆ ನೀಡಬೇಕೆಂದು ಹೈಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿಗೆ ನಿರ್ದೇಶನ ನೀಡಿ ಅರ್ಜಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದರು. ಕಳೆದ ಮಾರ್ಚ್ ತಿಂಗಳಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳು ಸೇರಿ ಈ ಸಮೀಕ್ಷೆ ನಡೆಸಿವೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 6ರಿಂದ 14 ವರ್ಷದೊಳಗಿನ 15,388 ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. 10 ಸಾವಿರ ಮಕ್ಕಳು ಶಾಲೆಯಲ್ಲಿ ಪ್ರವೇಶಾತಿಯನ್ನೇ ಪಡೆದಿಲ್ಲ. 3 ವರ್ಷದ 4.54 ಲಕ್ಷ ಮಕ್ಕಳು, 4ರಿಂದ 6 ವರ್ಷದೊಳಗಿನ 5.33 ಲಕ್ಷ ಮಕ್ಕಳು ಅಂಗನವಾಡಿ ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ 33.42 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಿದಾಗ ಈ ಸಂಗತಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ: ಬೆಂಗಳೂರು ಪೊಲೀಸರ ಸೂಚನೆ