ಬೆಂಗಳೂರು: ಉಪಚುನಾವಣೆ ಫಲಿತಾಂಶದಿಂದ ಧೃತಿಗೆಡುವ ಅವಶ್ಯಕತೆ ಇಲ್ಲ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸೋಣ ಎಂದು ಕಾರ್ಯಕರ್ತರಿಗೆ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲಿಗೆ ರಾಜರಾಜೇಶ್ವರಿ ನಗರ ಉಪಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಮತದಾರರ ತೀರ್ಪಿಗೆ ನಾವೆಲ್ಲ ತಲೆಬಾಗಲೇಬೇಕಿದೆ. ಈ ಫಲಿತಾಂಶದಿಂದ ಯಾವ ಕಾರ್ಯಕರ್ತರೂ ಧೃತಿಗೆಡುವ ಅವಶ್ಯಕತೆಯಿಲ್ಲ. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳೋಣ ಎಂದಿದ್ದಾರೆ.
ಈ ಫಲಿತಾಂಶವನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೊಡ್ಡ ಮಟ್ಟದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಪಕ್ಷ ಸಂಘಟನೆಯ ಎಲ್ಲಾ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ. ಉಪಚುನಾವಣೆಗೆ ಸಹಕರಿಸಿದ ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.