ಬೆಂಗಳೂರು: ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇತರೆ ಪಕ್ಷಗಳ ಪ್ರಭಾವಿ ನಾಯಕರುಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿದೆ. ಈಗಾಗಲೇ ಕೆಲವು ಬಿಜೆಪಿ ಶಾಸಕರು ಹಾಗೂ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಿಎಂ ಹಾಗೂ ಡಿಸಿಎಂರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಭೇಟಿ ವೇಳೆ ದಾವಣಗೆರೆ ಜಿಲ್ಲೆ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಉಭಯ ನಾಯಕರ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಸದಾಶಿವನಗರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಭೇಟಿ ಮಾಡಿ ಸುಮಾರು 15 ರಿಂದ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಸದ್ಯದ ರಾಜಕೀಯ ವಿದ್ಯಮಾನ ಹಾಗೂ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ರೇಣುಕಾಚಾರ್ಯ ಬೇಸರಗೊಂಡಿದ್ದಾರೆ ಎಂದು ಹೇಳಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇತ್ತ ರೇಣುಕಾಚಾರ್ಯರನ್ನು ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಬಿಜೆಪಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಪುನಃ ಟಿಕೆಟ್ ನೀಡಿದರೆ, ರೇಣುಕಾಚಾರ್ಯ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಕಡೆ ಮುಖ ಮಾಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ದಾವಣಗೆರೆ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಇಂಗಿತ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
'ರಾಜಕೀಯರಹಿತ ಭೇಟಿ': ಭೇಟಿಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ರೇಣುಕಾಚಾರ್ಯ, ಇದೊಂದು ರಾಜಕೀಯರಹಿತ ಭೇಟಿಯಾಗಿದೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. ನಾನು ಬಿಜೆಪಿಯಲ್ಲಿದ್ದರೂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳ ಜೊತೆಗೆ ಆತ್ಮೀಯವಾದ ಸಂಬಂಧ ಇಟ್ಟುಕೊಂಡಿದ್ದೇನೆ.
ಈ ಹಿಂದೆ ನಾನು ಹೊನ್ನಾಳಿಯಲ್ಲಿ ರಾಜ್ಯ ಮಟ್ಟದ ಕೃಷಿ ಸಮ್ಮೇಳನ ನಡೆಸಿದಾಗ ಇಬ್ಬರನ್ನೂ ಭೇಟಿಯಾಗಿ ಆಹ್ವಾನ ಕೊಟ್ಟಿದ್ದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ತಾಲ್ಲೂಕಿನಲ್ಲಿ ವಾಡಿಕೆಗಿಂತ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾದ ಪರಿಣಾಮ ರೈತರ ಬೆಳೆಗಳು ಸಂಪೂರ್ಣವಾಗಿ ಹಾಳಾಗಿ ಹೋಗಿವೆ. ಹೀಗಾಗಿ ಬರಪೀಡಿತ ತಾಲ್ಲೂಕು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ನೀಡಲು ಮನವಿ ಮಾಡಿರುವುದಾಗಿ ತಿಳಿಸಿದರು.
ಇದನ್ನೂ ಓದಿ: ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು: ಬೊಮ್ಮಾಯಿ