ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ. ಎ) ಶಾಶ್ವತ ಕಚೇರಿ ಪ್ರಾರಂಭಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿ ನೀಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಭೇಟಿಯಾಗಿ ಅವಕಾಶಕ್ಕಾಗಿ ಧನ್ಯವಾದ ಸಲ್ಲಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿದ್ದು, ಇತ್ತೀಚೆಗಿನ ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಕೃತ್ಯಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಎನ್ ಐ ಎ ಕಚೇರಿ ಬೆಂಗಳೂರಿನಲ್ಲಿ ಆರಂಭಿಸುವಂತೆ ಒತ್ತಾಯ ಮಾಡಿದ್ದು, ಇದಕ್ಕೆ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆಗಳನ್ನು ಪರಿಶೀಲಿಸಿದಾಗ ದೇಶವಿರೋಧಿ ಸಂಘಟನೆಗಳು ಬೆಂಗಳೂರನ್ನು ಆಶ್ರಯತಾಣವನ್ನಾಗಿ ಬಳಸಿಕೊಳ್ಳುತ್ತಿರುವುದು ಕಂಡು ಬಂದಿರುತ್ತದೆ. ದೇಶವಿರೋಧಿ ಕೃತ್ಯಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳಲು ಹಾಗೂ ಅಗತ್ಯ ಸಿಬ್ಬಂದಿಯನ್ನು ಒದಗಿಸುವ ಕುರಿತು ಕೇಂದ್ರ ಸಚಿವರಲ್ಲಿ ವಿನಂತಿಸಲಾಗಿದೆ.
ಹೈ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಈ ಕುರಿತು ವಿವರಿಸಿರುವ ಎನ್ ಐ ಎ, ಅಗತ್ಯ ಸಿಬ್ಬಂದಿ, ಮೂಲಭೂತ ಸೌಕರ್ಯಗಳ ಕುರಿತು ಅತೃಪ್ತಿ ವ್ಯಕ್ತಪಡಿಸಿದೆ. ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕೇಂದ್ರವಾಗಿರುವ ಬೆಂಗಳೂರು ನಗರವನ್ನು ಉಗ್ರಗಾಮಿ, ದೇಶವಿರೋಧಿ ಕೃತ್ಯಗಳಿಂದ ಮುಕ್ತವಾಗಿಡುವುದಕ್ಕೆ ಎನ್ಐಎ ಪ್ರಾದೇಶಿಕ ಕಚೇರಿಯ ಅಗತ್ಯವಿರುವುದನ್ನು ಮನವರಿಕೆ ಮಾಡಿಕೊಡಲಾಗಿದೆ. ಈ ಮನವಿಗೆ ಕೇಂದ್ರ ಗೃಹ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದರು ಎಂದು ವಿವರ ನೀಡಿದ್ದಾರೆ.