ಬೆಂಗಳೂರು: ರಾಜ್ಯದ 17 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಎದುರಾಗಿರುವ ಸಮಸ್ಯೆಗೆ ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸ್ಪಂದಿಸಿದ್ದಾರೆ. ಪರಿಹಾರ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುವುದಾಗಿ ನಾಗರಾಜ್ ಹೇಳಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ನಾಗರಾಜ್, ರಾಜ್ಯದ 17 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ಎಂಟಿಬಿ ಸಂಸ್ಥೆಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೇವೆ. ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ನೆರವು ನೀಡುವಂತೆ ಕೈಗಾರಿಕೋದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಅವರ ಮನವಿಗೆ ನಾವು ಸ್ಪಂದಿಸಿ ನಮ್ಮ ಸಂಸ್ಥೆಯಿಂದ ಈ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡುತ್ತಿದ್ದೇವೆ ಎಂದು ಎಂಟಿಬಿ ವಿವರಿಸಿದ್ದಾರೆ. ಈ ಹಿನ್ನೆಲೆ ಒಂದು ಕೋಟಿ ರೂಪಾಯಿ ಮೊತ್ತದ ಚೆಕ್ನ್ನು ನಾಳೆ ಸಿಎಂ ಯಡಿಯೂರಪ್ಪಗೆ ಹಸ್ತಾಂತರಿಸುವುದಾಗಿ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.