ಬೆಂಗಳೂರು: ಹೈಕೋರ್ಟ್ ಆವರಣದಲ್ಲಿ ಆಡಳಿತ ವ್ಯವಹಾರಗಳ ನಿರ್ವಹಣೆಗಾಗಿ ಹತ್ತು ಮಹಡಿಯ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಇರುವುದಾಗಿ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್.ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಶರಣ ದೇಸಾಯಿ ಎಂಬವರು ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ಸಲ್ಲಿಕೆಯಾಗಿದ್ದವು.
ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಮಾಹಿತಿ ನೀಡಿತು. ವಿಚಾರಣೆ ವೇಳೆ ಹೈಕೋರ್ಟ್ ಆಡಳಿತ ವಿಭಾಗದ ಪರ ಹಾಜರಾದ ಹಿರಿಯ ವಕೀಲ ನಾಗಾನಂದ, ಹೈಕೋರ್ಟ್ ವಿಸ್ತರಣೆಗೆ ಸ್ಥಳಾವಕಾಶ ಒದಗಿಸುವ ಸಂಬಂಧ ಮೂರು ಪ್ರಸ್ತಾವನೆಗಳನ್ನು ಸರ್ಕಾರ ಸಲ್ಲಿಸಿದೆ. ಅವುಗಳನ್ನು ಹೈಕೋರ್ಟ್ ಕಟ್ಟಡ ಸಮಿತಿ ಪರಿಶೀಲನೆ ನಡೆಸಲಿದೆ. ಹೈಕೋರ್ಟ್ ಆ.14ರಂದು ಹೊರಡಿಸಿದ ಆದೇಶದಂತೆ ಸರ್ಕಾರವು ಮೂರು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಆ ಮೂರು ಪ್ರಸ್ತಾವನೆಗಳನ್ನು ಹೈಕೋರ್ಟ್ ಕಟ್ಟಡ ಸಮಿತಿ ಪರಿಶೀಲಿಸಿ, ತನ್ನ ಅಭಿಪ್ರಾಯಗಳೊಂದಿಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕಿದೆ. ನಂತರ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ತೆಗೆದುಕೊಂಡು, ಅದನ್ನು ನ್ಯಾಯಾಲಯದ (ಹೈಕೋರ್ಟ್) ಮುಂದಿಡಬೇಕಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಸರ್ಕಾರದ ರಾಜ್ಯ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಈ ಮೂರು ಪ್ರಸ್ತಾವನೆಯಲ್ಲದೆ ಹೆಚ್ಚುವರಿಯಾಗಿ ನಾಲ್ಕನೇ ಪ್ರಸ್ತಾವನೆ ಸಹ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆಯಾಗಿದೆ. ಹತ್ತು ಮಹಡಿಗಳ ಕಟ್ಟಡಗಳನ್ನು ನಿರ್ಮಿಸುವುದೇ ನಾಲ್ಕನೇ ಪ್ರಸ್ತಾವನೆ. ಮೊದಲಿಗೆ ಆರು ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಇತ್ತು. ಆದರೆ, ಖುದ್ದು ಮುಖ್ಯ ಕಾರ್ಯದರ್ಶಿಗಳೇ ಲಂಬವಾಗಿ ಹತ್ತು ಮಹಡಿಗಳ ಕಟ್ಟಡವನ್ನು ಏಕೆ ನಿರ್ಮಾಣ ಮಾಡಬಾರದು ಎಂಬುದಾಗಿ ಕೇಳಿದ್ದಾರೆ. ಅದರಂತೆ ಹೊಸದಾಗಿ ಹತ್ತು ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಈ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್, ಒಂದು ವಾರದಲ್ಲಿ ರಾಜ್ಯ ಸರ್ಕಾರವು ಈ ನಾಲ್ಕು ಪ್ರಸ್ತಾವನೆಗಳನ್ನು ಹೈಕೋರ್ಟ್ ರಿಜಿಸ್ಟ್ರಿಗೆ ಅವರಿಗೆ ಸಲ್ಲಿಸಬೇಕು. ಪ್ರಸ್ತಾವನೆಗಳನ್ನು ಸ್ವೀಕರಿಸಿದರೆ, ಅದನ್ನು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಹೈಕೋರ್ಟ್ ಕಟ್ಟಡದ ಸಮಿತಿ ಮುಂದೆ ಮಂಡಿಸಬೇಕು. ನಂತರ ಹೈಕೋರ್ಟ್ ಆ.14ರಂದು ನೀಡಿರುವ ನಿರ್ದೇಶನದಂತೆ ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಒಂದು ತಿಂಗಳ ನಂತರಕ್ಕೆ ಮುಂದೂಡಿತು.
ಇದನ್ನೂ ಓದಿ: ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ.. ಎಲ್ಲ 215 ಸಂಸದರಿಂದ ಪರವಾಗಿ ಮತ ಚಲಾವಣೆ