ಬೆಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಮೃತರ ಸಹೋದರಿ ಅನುರಾಧಾ ಬಾಳಿಗ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಆರೋಪಿ ನರೇಶ್ ಶೆಣೈಗೆ ನೋಟಿಸ್ ಜಾರಿ ಮಾಡಿದೆ.
ಆರೋಪಿ ನರೇಶ್ ಶೆಣೈಗೆ ನೀಡಿರುವ ಜಾಮೀನು ರದ್ದುಪಡಿಸಬೇಕು ಹಾಗೂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಅನುರಾಧಾ ಬಾಳಿಗ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಎಂ.ಜಿ ಉಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ವಿಚಾರಣೆ ನಡೆಸಿದ ಪೀಠ, ಆರೋಪಿ ನರೇಶ್ ಶಣೈಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಮಂಗಳೂರಿನ ವೆಂಕಟರಮಣ ದೇವಸ್ಥಾನದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಆರೋಪಿಸಿದ್ದರು. ಆ ಬಳಿಕ 2016ರ ಮಾರ್ಚ್ 23ರಂದು ವಿನಾಯಕ ಬಾಳಿಗ ಅವರನ್ನು ಮಂಗಳೂರಿನ ಕೊಡಿಯಾಲ್ ಬೈಲ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಜೂನ್ 26ರಂದು ನರೇಶ್ ಶೆಣೈ ಅವರನ್ನು ಬಂಧಿಸಿದ್ದರು.
2016ರ ಸೆಪ್ಟೆಂಬರ್ 15 ರಂದು ಆರೋಪಿಗೆ ಜಾಮೀನು ನೀಡಿದ್ದ ಹೈಕೋರ್ಟ್ ದೇವಸ್ಥಾನದ ಸಮಿತಿಯ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡದಂತೆ ಷರತ್ತು ವಿಧಿಸಿತ್ತು. ಇದೀಗ ನರೇಶ್ ಶೆಣೈ ಹೈಕೋರ್ಟ್ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ವಿನಾಯಕ ಬಾಳಿಕ ಅವರ ಸಹೋದರಿ ಆರೋಪಿಯು ದೇವಸ್ಥಾನದ ಕಾರ್ಯಚಟುವಟಿಕೆಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿದ್ದಾರೆ.
ಈ ಮೂಲಕ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಶಣೈಗೆ ನೀಡಿರುವ ಜಾಮೀನು ರದ್ದುಪಡಿಸಬೇಕು ಹಾಗೂ ಆರೋಪಿಯನ್ನು ವಶಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.