ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಮೂವರು ಮಕ್ಕಳನ್ನು ದಾಖಲಿಸಿಕೊಳ್ಳುವಾಗ ದತ್ತು ಸ್ವೀಕಾರ ಮಾರ್ಗಸೂಚಿ ಪಾಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಜಿಲ್ಲಾಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಏಳು ದಿನಗಳ ಒಳಗಾಗಿ ಕೈಗೊಂಡ ಕ್ರಮ ಕುರಿತ ವರದಿ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಜಿಲ್ಲಾ ಎಸ್ಪಿಗೆ ನಿರ್ದೇಶಿಸಿದೆ.
ಆಯೋಗದ ಅಧ್ಯಕ್ಷ ನಾಗಣ್ಣಗೌಡರ ನಿರ್ದೇಶನದ ಮೇರೆಗೆ ಚಿತ್ರದುರ್ಗದ ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯುಸಿ) ಅಧಿಕಾರಿಗಳು ಮತ್ತು ಮಕ್ಕಳ ರಕ್ಷಣಾ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ದತ್ತು ಪ್ರಕ್ರಿಯೆಯಂತೆ ಮಠಕ್ಕೆ ಮಕ್ಕಳನ್ನು ದಾಖಲಿಸಿಕೊಂಡಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.
ಈ ಪ್ರಕರಣದ ಬಳಿಕ ಕೆಲ ವಿದ್ಯಾರ್ಥಿಗಳನ್ನು ಬೇರೆ ಬೇರೆ ಜಿಲ್ಲೆಗಳಿಗೆ ರವಾಸಿರುವುದು ಕಂಡುಬಂದಿದ್ದು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ನಿಯಮಾನುಸಾರ ವಿಚಾರಣೆಗೊಳಪಡಿಸಿ 7 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸೂಚಿಸಿದೆ.