ಬೆಂಗಳೂರು: ಪುಲಿಕೇಶಿ ನಗರದ ಮುಸ್ಲಿಂ ಸಮುದಾಯದ ನಾಯಕರು ತಮ್ಮ ಧರ್ಮಗುರುವಿನೊಂದಿಗೆ ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ್ದರು. ಶಿವಾನಂದ ವೃತ್ತದ ಸಮೀಪವಿರುವ ಸರ್ಕಾರಿ ನಿವಾಸಕ್ಕೆ ಆಗಮಿಸಿದ ನಾಯಕರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಶ್ರೀನಿವಾಸ ಮೂರ್ತಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಬೆಳಗ್ಗೆಯೇ ಆಗಮಿಸಿದ ಮುಸ್ಲಿಂ ಧರ್ಮಗುರುಗಳು ಹಾಗೂ ಮುಖಂಡರು ಕೆಪಿಸಿಸಿ ಕಚೇರಿಗೆ ತೆರಳುವ ಮುನ್ನವೇ ಸಿದ್ದರಾಮಯ್ಯರನ್ನು ಭೇಟಿಯಾದರು. ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿಲ್ಲ. ಒಬ್ಬರಿಗಿಂತ ಹೆಚ್ಚು ಪ್ರಬಲ ಆಕಾಂಕ್ಷಿಗಳಿರುವ ಹಾಗೂ ಒತ್ತಡವಿರುವ ಕ್ಷೇತ್ರಗಳನ್ನು ಹೊರತುಪಡಿಸಿ 124 ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿನ್ನೆ ಪ್ರಕಟಿಸಿದೆ.
ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಸಿದ್ದರಾಮಯ್ಯ ವರುಣ, ಡಿಕೆಶಿಗೆ ಕನಕಪುರ
ಮೊದಲ ಪಟ್ಟಿಯಲ್ಲಿ ಶ್ರೀನಿವಾಸ ಮೂರ್ತಿ ಸೇರಿದಂತೆ ಹಾಲಿ 9 ಶಾಸಕರಿಗೆ ಟಿಕೆಟ್ ಲಭಿಸಿಲ್ಲ. ಎರಡನೇ ಪಟ್ಟಿಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿದೆ. ಪುಲಿಕೇಶಿ ನಗರದಲ್ಲಿ ಟಿಕೆಟ್ಗಾಗಿ ಈಗಾಗಲೇ ದೊಡ್ಡ ಮಟ್ಟದ ಪೈಪೋಟಿ ನಡೆದಿದೆ. ಹಾಲಿ ಶಾಸಕ ಮೂರ್ತಿ ಜತೆ ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಮಾಜಿ ಶಾಸಕ ಪ್ರಸನ್ನ ಕುಮಾರ್ ಸೇರಿದಂತೆ ಹಲವು ನಾಯಕರು ಸ್ಪರ್ಧೆಗಿಳಿದಿದ್ದಾರೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಹ ಇದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳಿದ್ದವು. ಆದರೆ ಕೊರಟಗೆರೆಯಿಂದ ಅವರು ಕಣಕ್ಕಿಳಿಯುವುದನ್ನು ಖಚಿತಪಡಿಸಿರುವ ಹಿನ್ನೆಲೆಯಲ್ಲಿ ಇದೀಗ ಆಕಾಂಕ್ಷಿಗಳು ಕೊಂಚ ನಿರಾಳರಾಗಿದ್ದಾರೆ.
ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನೂರಾರು ಮಂದಿ ಅಖಂಡ ಬೆಂಬಲಿಗರು ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಸಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್ ಮಿಸ್ ಆಗಬಾರದು ಎಂದು ಆಗ್ರಹಿಸಿರುವ ಮುಸ್ಲಿಂ ಸಮುದಾಯದ ನಾಯಕರು, ಮೌಲ್ವಿಗಳಿಂದ ಒತ್ತಡ ಹೇರುವ ಯತ್ನ ನಡೆಸಿದ್ದಾರೆ.
ಸ್ಕ್ರೀನಿಂಗ್ ಕಮಿಟಿ ಬುಲಾವ್: ಮೊದಲ ಪಟ್ಟಿಯಲ್ಲಿ ಪ್ರಕಟವಾಗಿರುವ 124 ಕೈ ಅಭ್ಯರ್ಥಿಗಳಿಗೆ ಸ್ಕ್ರೀನಿಂಗ್ ಕಮಿಟಿ ಬುಲಾವ್ ನೀಡಿದೆ. ನಾಳೆ 124 ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲು ಸಮಿತಿ ತೀರ್ಮಾನಿಸಿದೆ. ಅಭ್ಯರ್ಥಿಗಳ ಜತೆ ಸಭೆ ನಡೆಸಲಿರುವ ಸ್ಕ್ರೀನಿಂಗ್ ಕಮಿಟಿ ಪ್ರಚಾರ, ರಣತಂತ್ರಗಳ ಬಗ್ಗೆ ಚರ್ಚಿಸಲಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ತುಮಕೂರು ಜಿಲ್ಲೆಯ 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ: ಗರಿಗೆದರಿದ ರಾಜಕೀಯ ಚಟುವಟಿಕೆ