ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನಿಯೋಜಿಸಲು ಹಿಂದಿನ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ನಿಯಮಬಾಹಿರವಾಗಿ ವರ್ಗಾವಣೆ ಮಾಡಿದ ಆರೋಪಕ್ಕೆ ಸಿಲುಕಿರುವ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಎದುರು ವಾದ ಮಂಡಿಸಲು ಮತ್ತೊಮ್ಮೆ ಕಾಲಾವಕಾಶ ಕೋರಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಬಿ. ಶರತ್ ಸಲ್ಲಿಸಿರುವ ಅರ್ಜಿಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ವಿಚಾರಣೆ ನಡೆಸುತ್ತಿದೆ. ಆದರೆ, ವಿಚಾರಣೆ ವೇಳೆ ವಾದ ಮಂಡಿಸಲುು ರಾಜ್ಯ ಸರ್ಕಾರ ನಿರಂತರವಾಗಿ ಕಾಲಾವಕಾಶ ಕೋರುತ್ತಲೇ ಇದೆ. ಈಗಾಗಲೇ ಎರಡು ಬಾರಿ ಕಾಲಾವಕಾಶ ಕೋರಿರುವ ಸರ್ಕಾರ, ಇದೀಗ ಮೂರನೇ ಬಾರಿಯೂ ಕಾಲಾವಕಾಶ ಕೋರಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ವಕೀಲರು, ಪ್ರಕರಣ ಸಂಬಂಧ ಅಡ್ವೋಕೇಟ್ ಜನರಲ್ ಅವರು ವಾದ ಮಂಡಿಸಬೇಕಾಗಿದೆ. ಆದರೆ, ಅವರಿಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದ್ದಾರೆ.
ಪ್ರಕರಣದ ಹಿನ್ನೆಲೆ: 2020ರ ಆಗಸ್ಟ್ 28 ರಂದು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ಬಿ. ಶರತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿತ್ತು. ಅದರಂತೆ ಅಧಿಕಾರ ವಹಿಸಿಕೊಂಡಿದ್ದ ಬಿ. ಶರತ್ ಅವರನ್ನು ಯಾವುದೇ ಸೂಕ್ತ ಕಾರಣ ನೀಡದೆ ಸೆಪ್ಟೆಂಬರ್ 28 ರಂದು ವರ್ಗಾವಣೆ ಮಾಡಿದೆ. ಒಂದು ತಿಂಗಳು ತುಂಬುವ ಮೊದಲೇ ವರ್ಗಾವಣೆ ಮಾಡಿದ್ದ ಸರ್ಕಾರ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ತಂದು ಕೂರಿಸಿದೆ. ಸರ್ಕಾರದ ಈ ಏಕಾಏಕಿ ವರ್ಗಾವಣೆ ಆದೇಶ ಕಾನೂನು ಬಾಹಿರ ಎಂದು ಆರೋಪಿಸಿರುವ ಶರತ್, ಸರ್ಕಾರದ ವರ್ಗಾವಣೆ ಆದೇಶ ರದ್ದುಗೊಳಿಸಬೇಕು ಎಂದು ಕೋರಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.