ಬೆಂಗಳೂರು: ನಾಳೆ ಕೈಗೊಳ್ಳಬೇಕಿದ್ದ ಮೈಸೂರು ಜಿಲ್ಲಾ ಪ್ರವಾಸವನ್ನು ರದ್ದುಪಡಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಗರದಲ್ಲಿ ನಡೆಯುವ ಕುರುಬರ ಹೋರಾಟದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಲಿದ್ದಾರೆ.
ಕರ್ನಾಟಕ ಕುರಿ ಮತ್ತು ಮೇಕೆ ಸಾಕಣೆದಾರರ ಸಂಘಗಳ ಮಹಾ ಮಂಡಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಓದಿ:ಪ್ರಧಾನಿ ಮೋದಿಯನ್ನು ಹೊಗಳಿದ ಕಾಂಗ್ರೆಸ್ ನಾಯಕ ಆಜಾದ್
ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳ ಅಧ್ಯಕ್ಷ ಪಂಡಿತ್ ರಾವ್ ಚಿದ್ರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಪ್ರಸ್ತುತ ಕುರಿ ಮತ್ತು ಮೇಕೆ ಸಾಕಾಣಿಕೆದಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಂದಿನ ಸರ್ಕಾರ ಕುರಿಗಾರರಿಗೆ ಜಾರಿಗೊಳಿಸಿದ್ದ ಅನೇಕ ಯೋಜನೆಗಳನ್ನು ಇಂದಿನ ಸರ್ಕಾರ ಕೈಬಿಟ್ಟಿದೆ. ಆದ್ದರಿಂದ ಈ ಸರ್ಕಾರದ ಧೋರಣೆಯನ್ನು ಖಂಡಿಸಿ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಕುರಿಗಾರರ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಈ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಬೆಂಬಲ ಸೂಚಿಸಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಹೋರಾಟಕ್ಕೆ ಇನ್ನಷ್ಟು ಬಲ ಬರುವಂತೆ ಮಾಡಲಿದ್ದಾರೆ.
ಪ್ರವಾಸ ರದ್ದು:
ಕೆ.ಆರ್. ನಗರದ ಕಾಂಗ್ರೆಸ್ ನಾಯಕ ಶಿವರಾಂ ಪುತ್ರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು, ಮೈಸೂರಿಗೆ ತೆರಳಿ ಅಲ್ಲಿ ಮತ್ತೊಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ಸಿದ್ದರಾಮಯ್ಯ ಇದನ್ನು ರದ್ದುಪಡಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಾಳೆ ಸಂಜೆ ಸಿದ್ದರಾಮಯ್ಯ ಮೈಸೂರಿನಲ್ಲಿಯೇ ತಂಗಲಿದ್ದಾರೆ ಎಂಬ ಮಾಹಿತಿ ಇತ್ತು. ಇದೀಗ ಅವರು ಅತ್ತ ಪ್ರಯಾಣ ಬೆಳೆಸುತ್ತಿಲ್ಲ ಎಂಬ ಮಾಹಿತಿ ಲಭಿಸಿದೆ.