ಬೆಂಗಳೂರು: ರಾಜ್ಯದ ಮಸೀದಿಗಳಲ್ಲಿ ನಮಾಜ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ತಡೆಯಲು ವಕ್ಫ್ ಮಂಡಳಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸಿರುವ ಸಂಬಂಧ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರಿಂದ ಪೀಠ ಸಾಕಷ್ಟು ಮಾಹಿತಿ ಪಡೆದುಕೊಂಡಿತು. ಈ ವೇಳೆ, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ಪ್ರಸ್ತಾಪಿಸಿದ ಪೀಠ, ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಮಾರ್ಚ್ 24 ರಂದು ನೀಡಿರುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಧಾರ್ಮಿಕ ಆರಾಧನೆ ಮತ್ತು ಪ್ರಾರ್ಥನಾ ಸ್ಥಳಗಳನ್ನು ಬಂದ್ ಮಾಡಲು ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ರಾಜ್ಯ ವಕ್ಫ್ ಮಂಡಳಿ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿತು.