ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಲು ಸಾಮರ್ಥ್ಯ ಇರುವ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ತೀರ್ಮಾನಿಸಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ದಳಪತಿಗಳು, 25 ಕ್ಷೇತ್ರಗಳ ಪೈಕಿ 6 ರಿಂದ 8 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಮುಖವಾಗಿ ಮಂಡ್ಯ, ಮೈಸೂರು, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ತಲಾ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದಾರೆ. ರಾಯಚೂರು, ಕಲಬುರಗಿ ಅಥವಾ ಉತ್ತರ ಕರ್ನಾಟಕದ ಯಾವ ಜಿಲ್ಲೆಯಲ್ಲಿ ಅಭ್ಯರ್ಥಿಯನ್ನು ಹಾಕಬೇಕೆಂದು ವರಿಷ್ಠರು ಸಮಾಲೋಚನೆ ನಡೆಸುತ್ತಿದ್ದಾರೆ.
ಆದರೆ, ಇನ್ನು ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆಗಳಿವೆ.
ಹಾಸನ ಕ್ಷೇತ್ರದಲ್ಲಿ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳು ಸ್ಪರ್ಧಿಸಲು ಮುಂದೆ ಬಂದರೆ ಟಿಕೆಟ್ ನೀಡುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಈಗಾಗಲೇ ಪಕ್ಷದ ಮುಖಂಡರಿಗೆ ಮಾಹಿತಿ ರವಾನಿಸಿದ್ದಾರೆ.
ಒಂದು ವೇಳೆ ಯಾರೂ ಆಸಕ್ತಿ ತೋರದಿದ್ದರೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಇಲ್ಲವೇ ಅವರ ಪುತ್ರ ಡಾ.ಸೂರಜ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಗೆ ಭವಾನಿ ರೇವಣ್ಣ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದೆ.
ಜೆಡಿಎಸ್ ಲೆಕ್ಕಾಚಾರ : ಇಪ್ಪತ್ತೈದು ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಹಿನ್ನಡೆ ಅನುಭವಿಸುವುದಕ್ಕಿಂತ ಗೆಲ್ಲುವಂತಹ ಕ್ಷೇತ್ರಗಳಲ್ಲಿ ಪ್ರಯತ್ನ ಮಾಡಿ ಚುನಾವಣೆ ಎದುರಿಸುವ ಲೆಕ್ಕಾಚಾರ ಹಾಕಿರುವ ದಳಪತಿಗಳು, ಈ ಚುನಾವಣೆಯಲ್ಲಿ ಮತದಾರರು ಸೀಮಿತವಾಗಿರುವುದರಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಹೊಣೆ ನೀಡಲು ಚಿಂತಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದೆ.
ವಿಧಾನ ಪರಿಷತ್ ಸದಸ್ಯರಾಗಿರುವ ಮೈಸೂರಿನ ಸಂದೇಶ್ ನಾಗರಾಜ್, ತುಮಕೂರಿನ ಕಾಂತರಾಜ್ ಹಾಗೂ ಕೋಲಾರ ಜಿಲ್ಲೆಯ ಸಿ.ಆರ್.ಮನೋಹರ್ ಅವರು ಪಕ್ಷ ಬಿಡುತ್ತಿರುವ ಹಿನ್ನೆಲೆ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಹುಡುಕಾಟ ನಡೆದಿದೆ.
ವಿಧಾನಪರಿಷತ್ನ 25 ಕ್ಷೇತ್ರಗಳಿಗೆ ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ನಾಳೆಯಿಂದ (ನ.16) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.