ಬೆಂಗಳೂರು : ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ. ಈ ಕಾರ್ಯಕ್ರಮದಲ್ಲಿ ತಮ್ಮ ಪಕ್ಷದ ನಾಯಕರು ಪಾಲ್ಗೊಳ್ಳದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಇದಕ್ಕೂ ರಾಜ್ಯದಲ್ಲೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪ ವಿಚಾರದ ಬಗ್ಗೆ ಮಾತನಾಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಹಾಗೂ ಬಿಜೆಪಿ ಸೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿವೆ. ಅದನ್ನು ಕಾಂಗ್ರೆಸ್ಗೆ ಸಹಿಸಲು ಆಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದ ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಆರೋಪ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜನವರಿ 22 ಪ್ರತಿಯೊಬ್ಬ ಭಾರತೀಯನಿಗೂ ಐತಿಹಾಸಿಕ ಕ್ಷಣವಾಗಿದೆ. ಇದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು.
ನಿನ್ನೆ ಕೋಲಾರ ಜಿಲ್ಲೆಯ ಮುಖಂಡರ ಸಭೆ ಕರೆಯಲಾಗಿತ್ತು. ಇಂದು ಮಂಡ್ಯ ಮತ್ತು ಕೆ ಆರ್ ನಗರದ ಎಂಟು ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ಇದೆ. ಚುನಾವಣೆ ಯಾವ ರೀತಿ ನಡೆಸಬೇಕು. ಮುಖಂಡರ ಅಭಿಪ್ರಾಯದ ಬಗ್ಗೆ ವರದಿ ಪಡೆದು ವರಿಷ್ಠರಿಗೆ ತಿಳಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: ಅಯೋಧ್ಯೆಯಲ್ಲಿ ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಚುನಾವಣಾ ರ್‍ಯಾಲಿ ಅಲ್ಲ: ಪ್ರಹ್ಲಾದ ಜೋಶಿ
ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯಮಟ್ಟದ ನಾಯಕರು. ಲೋಕಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ನಿಲ್ಲಬೇಕು ಎಂಬ ಬೇಡಿಕೆ ಇದೆ. ಮಂಡ್ಯದಿಂದಲೂ ಸ್ಪರ್ಧೆ ಮಾಡಬೇಕು ಎಂಬ ಕೋರಿಕೆಯೂ ಇದೆ. ಈ ಬಗ್ಗೆ ಸೂಕ್ತ ಸಂದರ್ಭದಲ್ಲಿ ನಿರ್ಧಾರ ತಿಳಿಸುತ್ತಾರೆ ಎಂದರು.
ಸಂಸದೆ ಸುಮಲತಾ ಭೇಟಿಯಾಗುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಮಂಡ್ಯದ ಸಂಸದರು ತಾನು ಬಿಜೆಪಿ ಜೊತೆ ಇದ್ದೇನೆ ಎಂದಿದ್ದಾರೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಕುಮಾರಣ್ಣ ಅವರು ಮಾತನಾಡುತ್ತಾರೆ. ಪ್ರತಿಯೊಬ್ಬರನ್ನೂ ಜೊತೆಗೆ ತೆಗೆದುಕೊಂಡು ಹೋಗಬೇಕು ಎಂದ ನಿಖಿಲ್, ಮಂಡ್ಯದಿಂದ ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಸ್ಪರ್ಧಿಸುವ ಕುರಿತಂತೆ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಅದಕ್ಕಾಗಿಯೇ ಇಂದಿನ ಸಭೆ ಕರೆಯಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ: ಸಿಎಂ ಸಿದ್ದರಾಮಯ್ಯ