ಬೆಂಗಳೂರು: ಎಸಿಬಿ ರದ್ದುಪಡಿಸಿ ಹೈಕೋರ್ಟ್ ನೀಡಿದ ತೀರ್ಪನ್ನು ತಾವು ಗೌರವಿಸುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಬೇಕೆಂದು ತೀರ್ಪು ನೀಡಿದ ಹೈಕೋರ್ಟ್ ಆದೇಶದ ವಿರುದ್ಧ ತಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಹೋಗುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ 2016ರಲ್ಲಿ ಲೋಕಾಯುಕ್ತಕ್ಕೆ ಇದ್ದ ಅಧಿಕಾರ ಮೊಟಕುಗೊಳಿಸಿ ಎಸಿಬಿ ರಚಿಸಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಜವಾಬ್ದಾರಿ ನೀಡಿದ್ದರು. 2018ರಲ್ಲಿ ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದ ವಿಭಾಗೀಯ ಪೀಠವು ಎಸಿಬಿ ರದ್ದುಪಡಿಸಿ ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡಿತ್ತು.
ಎಸಿಬಿ ರದ್ದತಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ: ರಾಜ್ಯದಲ್ಲಿನ ಎಸಿಬಿ ರದ್ದು ಮಾಡಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಮುಂದೆ ಇದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಬೇಕೆಂದು ಆದೇಶಿಸಿರುವುದನ್ನು ಕನಕರಾಜು ಪ್ರಶ್ನಿಸಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಿದ್ದ ವಿಭಾಗೀಯ ಪೀಠದ ಮುಂದೆ ಅರ್ಜಿ ವಿಚಾರಣೆ ಬಂದಿದ್ದು, ಶೀಘ್ರದಲ್ಲಿಯೇ ಮೇಲ್ಮನವಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಮೇಲ್ಮನವಿಯಲ್ಲಿ ರಾಜ್ಯ ಸರ್ಕಾರ ಎಸಿಬಿ ರದ್ದತಿ ಮತ್ತು ಎಸಿಬಿ ತನಿಖೆ ನಡೆಸುತ್ತಿರುವ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವುದರಿಂದ ಎದುರಾಗುವ ತಾಂತ್ರಿಕ ಸಮಸ್ಯೆಗಳ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ.
ಹೈಕೋರ್ಟ್ ಇತ್ತೀಚೆಗೆ ಎಸಿಬಿಯನ್ನು ರದ್ದುಪಡಿಸಿ ತೀರ್ಪು ನೀಡಿದಾಗ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಸುಪ್ರೀಕೋರ್ಟ್ಗೆ ಮೇಲ್ಮನವಿ ಸಲ್ಲಿಸದಿರುವ ಇಂಗಿತ ವ್ಯಕ್ತಪಡಿಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾನೂನು ತಜ್ಞರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.
ಇದನ್ನೂ ಓದಿ : ಎಸಿಬಿ ರದ್ಧತಿ ಬಗ್ಗೆ ಅಧ್ಯಯನ ವರದಿ ನೀಡಲು ಕಾನೂನು ಇಲಾಖೆಗೆ ಸೂಚನೆ: ಸಿಎಂ