ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅಸಮಾಧಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಯಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಯಸ್ ಎನ್ನುತ್ತಾರೆ. ಅದು ಕಾಂಪ್ರಮೈಸ್ ಅಷ್ಟೇ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿಯತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜತೆ ಭಿನ್ನಾಭಿಪ್ರಾಯ ಬಂದಿಲ್ಲ. ನಾನು ಗಟ್ಟಿ ಧ್ವನಿಯಲ್ಲಿ ಸ್ಪಷ್ಟಪಡಿಸುತ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಹಾಗು ಸತೀಶಣ್ಣನ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.
"ಡಿ.ಕೆ.ಶಿವಕುಮಾರ್ ಅವರನ್ನು ಯಾಕೆ ಎಳೆದು ತರ್ತೀರೀ?": ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ?. ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯೇ ಅಂತ ಮತ್ತೊಮ್ಮೆ ಸಚಿವರನ್ನು ಕೇಳಿ ಎಂದು ಹೇಳಿದ ಹೆಬ್ಬಾಳ್ಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಯಾಕೆ ಎಳೆದು ತರ್ತೀರಾ ಎಂದು ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್ಎಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು.
"ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ": ನಿನ್ನೆ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋಗಿದ್ದೆ. ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು. ಅವರು ಬೆಂಗಳೂರಿನಲ್ಲೇ ಇದ್ದರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಈ ವಿಚಾರವನ್ನು ಗಮನಕ್ಕೆ ತಂದಿದ್ದೆ ಎಂದು ತಿಳಿಸಿದರು.
ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಸಮರ್ಥರು. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ. ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ, ಕಾನೂನಿನ ಬಗ್ಗೆ ಅವರಿಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂಓದಿ: ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ... ನನ್ನ ಮೌನ ದೌರ್ಬಲ್ಯವಲ್ಲ: ಸಚಿವ ಸತೀಶ್ ಜಾರಕಿಹೊಳಿ