ಬೆಂಗಳೂರು : ಕಾಂಗ್ರೆಸ್ ಪಕ್ಷದ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ತಾವು ಯಾವುದೇ ಲಾಬಿ ನಡೆಸುವುದಿಲ್ಲ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ '' ಈ ಟಿವಿ ಭಾರತದೊಂದಿಗೆ ಮಾತನಾಡಿದ ಅವರು ಸಚಿವ ನಾಗುವ ಆಸೆಯಿದೆ ಹಾಗಂತ ಪ್ರಭಾವ ಬಳಸಿ ಒತ್ತಡ ಹೇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಚಿವರಾಗಲು ಕಾಂಗ್ರೆಸ್ ಪಕ್ಷದಲ್ಲಿ ಲಾಬಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ಹೀಗಾಗಿ ಸಚಿವ ಪದವಿಗಾಗಿ ಮೈ ಮೇಲೆ ಬಿದ್ದು ಹೋಗುವುದಿಲ್ಲ. ಪಕ್ಷವು ಆಸಕ್ತಿಯಿಂದ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಎಸ್.ಎಸ್ ಮಲ್ಲಿಕಾರ್ಜುನ ಹೇಳಿದರು.
ಹಲವಾರು ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಕೆಲವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ , ರಾಜ್ಯ ಕಾಂಗ್ರೆಸ್ ಉಸ್ತುವಾರಿ ರನದೀಪಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವರನ್ನು ಭೇಟಿ ಮಾಡಿ ಸಚಿವ ಸ್ಥಾನದ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಈ ಬಾರಿಯ ಕಾಂಗ್ರೆಸ್ ಸರಕಾರದ ಮಂತ್ರಿಮಂಡಲದಲ್ಲಿ ದಾವಣಗೆರೆ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಹೊಂದಿರುವ ಶಾಮನೂರು ಶಿವಶಂಕರಪ್ಪನವರ ಕುಟುಂಬಕ್ಕೆ ಒಂದು ಸಚಿವ ಸ್ಥಾನ ನೀಡುವುದು ಖಚಿತವೆಂದು ಹೇಳಲಾಗುತ್ತಿದೆ. ಹಿರಿಯರಾದ ಶಿವಶಂಕರಪ್ಪನವರಿಗೆ 92 ವರ್ಷ ವಾಗಿದ್ದರಿಂದ ಅವರ ಪುತ್ರರಾದ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಮಂತ್ರಿ ಪದವಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ : ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಖಂಡಿತವಾಗಿ ಪಕ್ಷ ಜಾರಿಗೆ ತರಲಿದೆ. ಸಣ್ಣ ಪುಟ್ಟ ಷರತ್ತುಗಳು ಸಹಜವಾಗಿರುತ್ತವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ನೀಡಿದೆ. ಇದನ್ನು ಉಳಿಸಿ ಬೆಳಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿಯಾಗಿದೆ ಎಂದು ಎಸ್.ಎಸ್ ಮಲ್ಲಿಕಾರ್ಜುನ ತಿಳಿಸಿದರು.
ಶೆಟ್ಟರ್ ಅವರಿಗೆ ಒಳ್ಳೆ ಹುದ್ದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಿದೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಟಾರ್ಗೆಟ್ ಮಾಡಿದ್ದರಿಂದ ಶೆಟ್ಟರ್ ಅವರಿಗೆ ಸೋಲಾಗಿದೆ. ಆದರೂ ಸಹ ಕಾಂಗ್ರೆಸ್ ಹೈಕಮಾಂಡ್ ಶೆಟ್ಟರ್ ಅವರಿಗೆ ಒಳ್ಳೆ ಹುದ್ದೆ ನೀಡುವ ತೀರ್ಮಾನ ತಗೆದುಕೊಳ್ಳಲಿದೆ ಎಂದು ಮಲ್ಲಿಕಾರ್ಜುನ ಭರವಸೆ ನೀಡಿದರು.
ವೀರಶೈವ ಲಿಂಗಾಯತರಿಗೆ ಮುಖ್ಯಮಂತ್ರಿ , ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಬೇಡಿಕೆಯಿತ್ತು. ಪಕ್ಷದ ಹೈಕಮಾಂಡ್ ಅವರವರ ಶಕ್ತಿ ಸಾಮರ್ಥ್ಯಕ್ಕನುಗುಣವಾಗಿ ಸೂಕ್ತ ತೀರ್ಮಾನ ಕೈಗೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಂದಾಳತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಲಾಗಿತ್ತು ಎಂದು ಮಲ್ಲಿಕಾರ್ಜುನ ಅವರು ಹೇಳಿದರು.
ಇದನ್ನೂ ಓದಿ : 2,000 ರೂ. ನೋಟು ಹಿಂಪಡೆದ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ..