ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಾರ್ ಪ್ರಚಾರಕರಾಗಿದ್ದರು. ಅವರ ಪ್ರಚಾರದ ವೆಚ್ಚ ತೋರಿಸಬೇಕಾದ ಅಗತ್ಯವಿಲ್ಲ ಎಂಬುದಾಗಿ ನಿಯಮಗಳಲ್ಲಿದೆ. ಹೀಗಾಗಿ, ಅವರ ಖರ್ಚನ್ನು ತೋರಿಸಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ಗೆ ವಿವರಿಸಿದ್ದಾರೆ.
‘ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡ ಅಭ್ಯರ್ಥಿ ಎ. ಮಂಜು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದರು.
ಅಲ್ಲದೆ, ಅನಿತಾ ಕುಮಾರಸ್ವಾಮಿ ಅವರು ಹೊಳೆನರಸೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಆದರೆ, ಚುನಾವಣೆ ಮುಗಿದ ಒಂದು ತಿಂಗಳ ಬಳಿಕ ಅವರು ಬಂದಿದ್ದರು. ಆದ್ದರಿಂದ ಚುನಾವಣೆ ಪ್ರಚಾರದ ವೆಚ್ಚದಲ್ಲಿ ಈ ಅಂಶವನ್ನು ಉಲ್ಲೇಖಿಸಿಲ್ಲ. ಲಕ್ಸುರಿ ಕಾರುಗಳು, ಆಟೋ ರಿಕ್ಷಾಗಳು ಹಾಗೂ ಇತರೆ ವಾಹನಗಳಲ್ಲಿ ಜನರೊಂದಿಗೆ ಹೆಚ್ಚು ಹಣ ವೆಚ್ಚ ಮಾಡಿ ಪ್ರಚಾರ ನಡೆಸಿರುವ ಅಂಶ ಸತ್ಯಕ್ಕೆ ದೂರವಾಗಿದೆ ಎಂದು ವಕೀಲರ ಪ್ರಶ್ನೆಗೆ ಪ್ರಜ್ವಲ್ ರೇವಣ್ಣ ಉತ್ತರಿಸಿದರು.
ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ವಕೀಲರೊಂದಿಗೆ ಮಾತನಾಡುವುದಕ್ಕೆ ಮುಂದಾದಾಗ, ಹೈಕೋರ್ಟ್ ಕೇಳಿದ ಪ್ರಶ್ನೆಗೆ ಮಾತ್ರ ಉತ್ತರಿಸಿ ಅದನ್ನು ಹೊರತುಪಡಿಸಿ ಇನ್ನೇನನ್ನೂ ಹೇಳಬೇಡಿ ಎಂದು ನ್ಯಾಯಾಲಯ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಅಕ್ರಮ ಎಸಗಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಆಸ್ತಿಯ ಕುರಿತು ನಿಖರ ಮಾಹಿತಿ ನೀಡಿಲ್ಲ. ಖರ್ಚು–ವೆಚ್ಚಗಳನ್ನು ನ್ಯಾಯೋಚಿತವಾಗಿ ಸಲ್ಲಿಸಿಲ್ಲ. ಆದ್ದರಿಂದ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ನನ್ನನ್ನೇ ಗೆದ್ದ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.
ಇದನ್ನೂ ಓದಿ: ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪ: ಹೈಕೋರ್ಟ್ನಲ್ಲಿ ವಿಚಾರಣೆ ಎದುರಿಸಿದ ಸಂಸದ ಪ್ರಜ್ವಲ್ ರೇವಣ್ಣ