ಬೆಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪದೇ ಪದೇ ಕ್ಯಾತೆ ತೆಗೆದಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ. ಕರ್ನಾಟಕ ಕೈಗೊಂಡಿರುವ ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಪುಣ್ಯಸ್ಮರಣೆ ಪ್ರಯುಕ್ತ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆರಂಭ ಮಾಡೇ ಮಾಡುತ್ತೇವೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಯೋಜನೆಗೆ ಅನುಕೂಲಕರವಾದ ವಾತಾವರಣವಿದ್ದು, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎರಡು ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಇರಲಿ ಅನ್ನೋ ಸದುದ್ದೇಶ ಹಿನ್ನೆಲೆ ಮೇಕೆದಾಟು ಯೋಜನೆ ಬಗ್ಗೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದೆ. ಆದರೆ ಅವರು ಸರಿಯಾಗಿ ಸ್ಪಂದಿಸಲಿಲ್ಲ. ನಾವು ಯೋಜನೆ ಆರಂಭ ಮಾಡ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಸ್ಥಳ ಪರಿಶೀಲನೆ
ಬಸವೇಶ್ವರ ಪುತ್ಥಳಿ ಸ್ಥಾಪನೆ ಸಂಬಂಧ ವಿಧಾನಸೌಧದ ಆವರಣದಲ್ಲಿ ಸಿಎಂ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಾದ ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.