ಬೆಂಗಳೂರು: ನಮ್ಮ ಜೊತೆ ಮೈತ್ರಿ ಸರ್ಕಾರದ ಯಾರೂ ಸಂಪರ್ಕದಲ್ಲಿ ಇಲ್ಲ. ನಾವು ಯಾರನ್ನೂ ಸಂಪರ್ಕಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಿಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಊಹಾಪೋಹಗಳು, ಶಾಸಕರ ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ. ಸ್ವತಂತ್ರವಾಗಿ ಅವರು ತೆಗೆದುಕೊಳ್ಳುವ ನಿರ್ಧಾರವನ್ನ ನಾವು ಕೂಡ ಕಾದು ನೋಡುತ್ತೇವೆ ಎಂದರು.
ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರ ನಾನು ಟಿವಿಯಲ್ಲಿ ನೋಡಿದೆ. ಆ ಬಗ್ಗೆ ನನಗೆ ಏನು ಗೊತ್ತಿಲ್ಲ. ಆದರೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಬಂಧ ಒಂದು ಪತ್ರ ಬರೆದಿದ್ದಾರೆ ಅಂತ ಮಾಹಿತಿ ಇದೆ. ಅವರು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು.
ಬಿಜೆಪಿ ಶಾಸಕರನ್ನು ನಾವು ಕೂಡ ಸೆಳೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಪಾಪ ಅವರು ಮಾಡಬೇಕಿದೆ. ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಮುಂದುವರೆಸಲಿ ಎಂದು ವ್ಯಂಗ್ಯವಾಡಿದರು.