ಬೆಂಗಳೂರು : ಸಾರ್ವಜನಿಕ ಸ್ಥಳಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದೆ.
ಈ ಕುರಿತು ಗಿರೀಶ್ ಭಾರದ್ವಾಜ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, ಶಬ್ದ ಮಾಲಿನ್ಯ ಸಂಬಂಧ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗುತ್ತಿದೆ.
ಪ್ರತಿ ತಿಂಗಳು ಅವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಶಬ್ದ ಮಾಲಿನ್ಯ ಉಂಟು ಮಾಡುವ ಸ್ಥಳಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ಎಂದು ವಿವರಿಸಿದರು.
ಓದಿ:ತಾಯಿ, ಮಗು ಮೇಲೆ ಆ್ಯಸಿಡ್ ದಾಳಿ ಪ್ರಕರಣ.. ಹೈಕೋರ್ಟ್‌ನಿಂದ ಆರೋಪಿಯ ಜಾಮೀನು ರದ್ದು..
ಮಧ್ಯಪ್ರವೇಶಿಸಿದ ಪೀಠ, ಪೊಲೀಸರ ಬಳಿ ಶಬ್ದ ಮಾಲಿನ್ಯ ಅಳೆಯುವ ಮಾಪಕಗಳೇ ಸರಿಯಾದ ಪ್ರಮಾಣದಲ್ಲಿಲ್ಲ. ಹೀಗಿರುವಾಗ ಪರಿಶೀಲನೆ ನಡೆಸುವುದು ಹೇಗೆ? ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ನಿರ್ದೇಶನಗಳನ್ನು ಸರ್ಕಾರ ಹೊರಡಿಬೇಕು.
ಅಷ್ಟಕ್ಕೂ, ಸಾರ್ವಜನಿಕ ಸ್ಥಳಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವವರ ವಿರುದ್ಧ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಜ.11ರಂದು ಆದೇಶಿಸಲಾಗಿತ್ತು.
ಈ ಬಗ್ಗೆ ಸರ್ಕಾರ ಏನನ್ನೂ ಹೇಳಿಲ್ಲ. ಆದ್ದರಿಂದ ಈ ಕುರಿತು ವರದಿ ಸಲ್ಲಿಸಲು ಕಡೆಯ ಅವಕಾಶ ನೀಡುತ್ತಿರುವುದಾಗಿ ಹೇಳಿ ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ : ರಾಜ್ಯಾದ್ಯಂತ ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಪರವಾನಿಗೆ ಇಲ್ಲದೆ ಧ್ವನಿವರ್ಧಕಗಳನ್ನು ಬಳಸುತ್ತಾರೆ. ಧ್ವನಿವರ್ಧಕಗಳಿಂದ ಹೊರ ಬರುವ ಶಬ್ದದಿಂದ ತೊಂದರೆ ಉಂಟಾಗುತ್ತಿದೆಯಲ್ಲದೆ, ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ.
ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಕ್ರಮ ಜರುಗಿಸಲು ಸರ್ಕಾರ, ಗೃಹ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.