ಬೆಂಗಳೂರು: ಶಬ್ದ ಮಾಲಿನ್ಯ ಉಂಟುಮಾಡುವವರ ವಿರುದ್ಧ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ಹಾಗೂ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರು ದಾಖಲಿಸಲು ಸಿಲಿಕಾನ್ ಸಿಟಿಯ ಎಲ್ಲಾ ಠಾಣೆಗಳ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಸೂಚನೆ ನೀಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಗಿರೀಶ್ ಭಾರದ್ವಾಜ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು.
ಬಳಿಕ ವಿವರಣೆ ನೀಡಿ, ಶಬ್ದ ಮಾಲಿನ್ಯ ಉಂಟು ಮಾಡುತ್ತಿದ ನಗರದ 8 ಮಸೀದಿ, 1 ಚರ್ಚ್ ಮತ್ತು 3 ದೇವಸ್ಥಾನಗಳ ವಿರುದ್ಧ ಆಯಾ ವಿಭಾಗದ ಎಸಿಪಿ ಕಾನೂನು ಕ್ರಮ ಜರುಗಿಸಿದ್ದಾರೆ. ಕಾನೂನು, ಸುವ್ಯವಸ್ಥೆ ನೋಡಿಕೊಳ್ಳುವ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೂ ಶಬ್ದ ಮಾಲಿನ್ಯ ಅಳೆಯುವ ಮಾಪಕ ಒದಗಿಸಲಾಗಿದೆ. ಶಬ್ದ ಮಾಲಿನ್ಯ ಉಂಟು ಮಾಡುವವರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 15ರಡಿ ದೂರು ದಾಖಲಿಸುವಂತೆ ಎಲ್ಲಾ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟಗಳಿಗೆ ಸೂಚನೆ ನೀಡಲಾಗಿದೆ.
ಅಲ್ಲದೇ, ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ಆಯುಕ್ತರು ಕ್ಷಮೆ ಕೋರಿದ್ದಾರೆ. ಪ್ರಸ್ತುತ ಪೊಲೀಸ್ ಠಾಣೆಗಳಿಗೆ ಒದಗಿಸಿರುವ ಮಾಪಕಗಳೆಲ್ಲವೂ ಕಾರ್ಯ ನಿರ್ವಹಣೆ ಸ್ಥಿತಿಯಲ್ಲಿವೆ. ಅವುಗಳನ್ನು ಬಳಸುವ ಪೊಲೀಸರಿಗೆ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಮಾಣ ಪತ್ರದಲ್ಲಿ ನಗರದ ಪೊಲೀಸ್ ಠಾಣೆಗಳಿಗೆ ಎಷ್ಟು ಮಾಪಕಗಳ ಅಗತ್ಯವಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಮುಂದಿನ ವಿಚಾರಣೆ ವೇಳೆ ಈ ಕುರಿತು ಮಾಹಿತಿ ನೀಡಿ ಪ್ರಮಾಣ ಪತ್ರ ಸಲ್ಲಿಸಿ ಎಂದು ಆಯುಕ್ತರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಕೆಎಸ್‌ಪಿಸಿಬಿ ಅಧಿಕಾರಿ ವಿರುದ್ಧ ಕ್ರಮದ ಎಚ್ಚರಿಕೆ :
ಇದೇ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ)ಯ ಪರಿಸರ ಅಧಿಕಾರಿಯು ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ತಮಗೆ ಬಂದಿದ್ದ ದೂರುಗಳನ್ನು ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಿತ್ತು. ಆದರೆ ಅವರು ತಮಗೆ ಬಂದಿದ್ದ ದೂರುಗಳನ್ನು ನಗರ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ ಆಯುಕ್ತರಿಗೆ ರವಾನಿಸುವ ಮೂಲಕ ಪೋಸ್ಟ್‌ಮನ್ ರೀತಿ ನಡೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ಅಧಿಕಾರಿಯ ನಡವಳಿಕೆ ಹಾಗೂ ಕೆಎಸ್‌ಪಿಸಿಬಿಗೆ ಬಂದಿದ್ದ ದೂರುಗಳ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಮಂಡಳಿಯ ಮುಖ್ಯಸ್ಥರಿಗೆ ಏ.19ರಂದು ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ ಮುಖ್ಯಸ್ಥರು ಪ್ರಮಾಣಪತ್ರ ಸಲ್ಲಿಸಿಲ್ಲ. ಹೀಗಾಗಿ ಮಂಡಳಿ ಮುಖ್ಯಸ್ಥರು 2 ವಾರಗಳಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ತಪ್ಪಿದರೆ ಮುಖ್ಯಸ್ಥರ ವಿರುದ್ಧ ಸಿವಿಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಕೆ ನೀಡಿತು.