ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಹಣಕಾಸಿನ ವ್ಯವಹಾರವನ್ನು ನಡೆಸದಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಈ ಸಂಬಂಧ ಇಂದು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 41 ರಂತೆ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ 5 ವರ್ಷಗಳಿಗೆ, ನಿಗಧಿಪಡಿಸಿದ್ದು, ಪ್ರಕರಣ 42ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಹುದ್ದೆಯ ಅವಧಿ ಗ್ರಾಮ ಪಂಚಾಯತಿ ಪ್ರಥಮ ಸಭೆಗೆ ಗೊತ್ತುಪಡಿಸಿದ ದಿನಾಂಕದಿಂದ ಪ್ರಾರಂಭವಾಗಿ 5 ವರ್ಷಗಳ ಅವಧಿಯವರೆಗೆ ಇರುತ್ತದೆ.
ಪ್ರಸ್ತುತ ಕೆಲವು ಗ್ರಾಮ ಪಂಚಾಯಿತಿಗಳ ಅವಧಿ ಪೂರ್ಣಗೊಂಡಿದ್ದು, ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳು ಸರ್ಕಾರದ ಮುಂದಿನ ನಿರ್ದೇಶನ ವರೆಗೆ ಯಾವುದೇ ಸಭೆಗಳು ಮತ್ತು ಹಣಕಾಸು ವ್ಯವಹಾರವನ್ನು ಮಾಡಬಾರದೆಂದು ಕ್ರಮ ಕೈಗೊಳ್ಳುವಂತೆ ತಾವು ನಿರ್ದೇಶಿಲ್ಪಟ್ಟಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪನಿರ್ದೇಶಕ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಬಿ. ನವೀನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.