ಬೆಂಗಳೂರು : ಸಚಿವಾಲಯದ ಎಲ್ಲಾ ಅಧೀನ ಕಾರ್ಯದರ್ಶಿಗಳು ಹಾಗೂ ಮೇಲ್ಪಟ್ಟ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ.
ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಅಗತ್ಯತೆಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಆದ ಕಾರಣ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕೆಂದು ಹಾಗೂ ಮೇಲಧಿಕಾರಿಗಳ ಸೇವೆಯನ್ನು ಬಯಸಿದಲ್ಲಿ ಯಾವುದೇ ಕಾರಣ ನೀಡದೆ ಕಚೇರಿಗೆ ಹಾಜರಾಗಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪ್ರಸ್ತಾಪಿಸಿರುವ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಶೇ.100 ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಉಳಿದ ಇಲಾಖೆಗಳಲ್ಲಿನ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ.33 ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯಲ್ಲಿ ನಿರ್ದೇಶಿಸಿದ್ದಾರೆ.
ಶಾಸಕರ ಭವನದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಅಲ್ಲಿನ ಅಧಿಕಾರಿ/ನೌಕರರು ಅಲ್ಲಿನ ಕಾರ್ಯಗಳಿಗೆ ಅಗತ್ಯತೆಗೆ ಅನುಗುಣವಾಗಿ ಕ್ಷೇತಾಧಿಕಾರಿಗಳು ನಿಯೋಜಿಸಿದಂತೆ ಕಾರ್ಯನಿರ್ವಹಿಸಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.