ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ಪ್ರಥಮ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೊ, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿ ಶುರು ಮಾಡಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೊ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ ಆಫ್‌ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿದೆ. ಹೀಗಾಗಿ ಪ್ರಥಮ-ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್ ತರಗತಿಗಳನ್ನು ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ.
ಇಂದಿನ ಸಭೆಯಲ್ಲಿ ಮುಖ್ಯವಾಗಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದರು.