ಬೆಂಗಳೂರು: ಇತಿಹಾಸದ ಬಗ್ಗೆ ಈಗಿನ ಹಾಗೂ ಮುಂದಿನ ಪೀಳಿಗೆಗೆ ಗೊತ್ತಾಗಬೇಕು. ಹಾಗಾಗಿ, 300-400 ವರ್ಷಗಳ ದಾಖಲೆಗಳ ಡಿಜಿಟಲೀಕರಣ ಆಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿರುವ ಐತಿಹಾಸಿಕ ದಾಖಲೆಗಳ ಮತ್ತು ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಪರೂಪದ ದಾಖಲೆಗಳನ್ನು ಡಿಜಿಟಲ್ ಮಾಡಿಸಿ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ 3 ದಿನ ಪ್ರದರ್ಶನ ಮಾಡಲಾಗುತ್ತಿದೆ ಎಂದರು.
ಇದಕ್ಕೂ ಮುನ್ನ ವಸತಿ ಸಚಿವ ವಿ.ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಕಾಲೇಜ್ ವಿದ್ಯಾರ್ಥಿಗಳಿಂದ ವೀಕ್ಷಣೆ: ನಗರದ ಹಲವು ಕಾಲೇಜಿನ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದರು. ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಮೂರು ದಿನಗಳ ಕಾಲ ಈ ಪ್ರದರ್ಶನವನ್ನು ಏರ್ಪಡಿಸಲಾಗಿದೆ.