ಬೆಂಗಳೂರು : ಚಿಂದಿ ಆಯುವವರ ಮಕ್ಕಳಿಗೆ ಸಫಾಯಿ ಕರ್ಮಚಾರಿ ಸಮುದಾಯಕ್ಕೆ ಮೀಸಲಿಟ್ಟಿರುವ ಸ್ಥಾನಗಳಲ್ಲೇ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಸಫಾಯಿ ಕರ್ಮಚಾರಿ ಮಕ್ಕಳಿಗೆ ನಿಗದಿಪಡಿಸಿರುವ ಶೇಕಡ 5ರಷ್ಟು ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳನ್ನು ಒಳಗೊಂಡಂತೆ 6ನೇ ತರಗತಿಗೆ ಪ್ರವೇಶಾತಿ ನೀಡಲು, ಸಕ್ರಮ ಪ್ರಾಧಿಕಾರಿಗಳಾದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪಂಚಾಯತ್ ಸಂಸ್ಥೆಗಳಿಂದ ಚಿಂದಿ ಆಯುವವರ ಪ್ರಮಾಣ ಪತ್ರ ಪಡೆಯುವ ಷರತ್ತಿಗೆ ಒಳಪಟ್ಟು, ಪ್ರವೇಶಾತಿ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳಲ್ಲಿ ಚಿಂದಿ ಆಯುವವರ ಮಕ್ಕಳಿಗೆ ಆರನೇ ತರಗತಿ ಪ್ರವೇಶಾತಿ ನೀಡುವ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರನ್ವಯ ವಿಶೇಷ ವರ್ಗಗಳಿಗೆ ಸ್ಥಾನ ಹಂಚಿಕೆಯಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಶೇ 5ರಂತೆ ಸ್ಥಾನ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಚಿಂದಿ ಆಯುವವರ ಮಕ್ಕಳನ್ನು ಸಫಾಯಿ ಕರ್ಮಚಾರಿಗಳ ಮಕ್ಕಳ ಮೀಸಲಾತಿಯಲ್ಲಿ ಪರಿಗಣಿಸಬೇಕಿದೆ.
ಚಿಂದಿ ಆಯುವವರಿಗೆ ಪ್ರಮಾಣಪತ್ರ ನೀಡಲು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪಂಚಾಯತ್ ಸಂಸ್ಥೆಗಳನ್ನು ಸಕ್ಷಮ ಪ್ರಾಧಿಕಾರಗಳೆಂದು ನಿಗದಿಪಡಿಸಿ, ಸಫಾಯಿ ಕರ್ಮಚಾರಿಗಳ ಮಕ್ಕಳ ಮೀಸಲಾತಿ ಅಡಿಯಲ್ಲಿ ಚಿಂದಿ ಆಯುವವರ ಮಕ್ಕಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಆರನೇ ತರಗತಿಗೆ ಪ್ರವೇಶಾತಿ ನೀಡುವ ಕುರಿತು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕೃಷಿ ಇಲಾಖೆ- 2 ಸಾವಿರ ಹುದ್ದೆ ಭರ್ತಿಗೆ ಪ್ರಸ್ತಾವನೆ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಹಂತಗಳಲ್ಲಿ ಕನಿಷ್ಠ 1000 ಹುದ್ದೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗೆ ನೇಮಕಗೊಂಡವರಿಗೆ ನೇಮಕಾತಿ ಪತ್ರ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆಯಲಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಬಂದ ನಾಲ್ಕೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ 32 ಅಭ್ಯರ್ಥಿಗಳು ನೇಮಕಗೊಂಡಿದ್ದು, ಎಲ್ಲರಿಗೂ ನೇಮಕಾತಿ ಆದೇಶವನ್ನು ನೀಡಲಾಗುತ್ತಿದೆ ಎಂದ ಅವರು, ಕೃಷಿ ಇಲಾಖೆಯ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಖಾಲಿ 2 ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ