ಬೆಂಗಳೂರು: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ವಿಧಾನಸೌದ ಚಲೋ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 12 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ, ಸಂಯುಕ್ತ ಹೋರಾಟ ಕರ್ನಾಟಕ ಸಂಯೋಜನಕ ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ.
ನಾಳಿನ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶ ರೈತ ಮುಖಂಡ ರಾಕೇಶ್ ಟಿಕಾಯತ್ ಭಾಗಿಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.