ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಚೇತನರು ಹಾಗೂ ಇತರ ರೀತಿಯ ಅಂಗವೈಕಲ್ಯತೆ ಹೊಂದಿರುವ ನೌಕರರಲ್ಲಿ ಶೇ.50ರಷ್ಟು ಮಂದಿ ಪರ್ಯಾಯ ದಿನಗಳ ಆಧಾರದಲ್ಲಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿ ಜನವರಿ 5 ರಂದು ಹೊರಡಿಸಿರುವ ಸುತ್ತೋಲೆಯನ್ನು ಮರು ಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಓದಿ: ಅಮಿತ್ ಶಾ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ವಿಶೇಷ ಸಭೆ ಆರಂಭ
ಕರ್ನಾಟಕ ಅಂಧರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ-ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿಹೀನ ಹಾಗೂ ಇತರ ವಿಶೇಷ ಚೇತನ ಅಧಿಕಾರಿ, ಸಿಬ್ಬಂದಿ ಪರ್ಯಾಯ ದಿನಗಳ ಆಧಾರದ ಮೇಲೆ ಪ್ರತಿದಿನ ಶೇ.50ರಷ್ಟು ಮಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಜ.5 ರಂದು ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಆದೇಶಕ್ಕೆ ಆಕ್ಷೇಪಿಸಿರುವ ಪೀಠ, ಶೇ.50ರಷ್ಟು ವಿಶೇಷ ಚೇತನ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿರುವುದರ ಹಿನ್ನೆಲೆ, ನಮಗೆ ಅರ್ಥವಾಗುತ್ತಿಲ್ಲ. ಗರ್ಭಿಣಿಯರು ಹಾಗೂ ವಿಶೇಷ ಚೇತನರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಹೀಗಿದ್ದರೂ ರಾಜ್ಯ ಸರ್ಕಾರ ವಿವೇಚನೆ ಬಳಸದೆ ಶೇ.50ರಷ್ಟು ಅಂಧ ಅಥವಾ ವಿಶೇಷ ಚೇತನ ನೌಕರರ ಹಾಜರಾತಿಗೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಿದ್ದೇಕೆ? ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಅಲ್ಲದೇ, ನಗರದಲ್ಲಿ ಪ್ರತಿದಿನ 400ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಸಂದರ್ಭದಲ್ಲಿ ಗರ್ಭಿಣಿಯರು, ಅಂಧರು ಹಾಗೂ ವಿಶೇಷ ಚೇತನ ನೌಕರರು ಕಚೇರಿಗೆ ಬಂದು ಹೋಗುವುದಾದರೂ ಹೇಗೆ ಎಂದು ಪ್ರಶ್ನಿಸಿರುವ ಪೀಠ, ಸರ್ಕಾರ ತನ್ನ ಆದೇಶವನ್ನು ಮರುಪರಿಶೀಲಿಸಿ ಜ.29ರ ಒಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆ.1ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:
ಸರ್ಕಾರಿ ಕಚೇರಿಗಳಲ್ಲಿ ಶೇ.100 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿ ಮೇ.19 ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ಕರ್ನಾಟಕ ಅಂಧರ ಒಕ್ಕೂಟ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಕೋವಿಡ್ ಸಂದರ್ಭದಲ್ಲಿ ವಿಶೇಷ ಚೇತನರು ಅದರಲ್ಲೂ ಅಂಧ ನೌಕರರು ಕಚೇರಿಗೆ ಹಾಜರಾಗಿ ಕೆಲಸ ನಿರ್ವಹಿಸುವುದು ಕಷ್ಟ. ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಅಗತ್ಯ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.
2020ರ ನವೆಂಬರ್ 26 ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರ ತನ್ನ ನಿರ್ಧಾರವನ್ನು ಅಂಧ ನೌಕರರ ವಿಚಾರದಲ್ಲಿ ಮರುಪರಿಶೀಲಿಸುವಂತೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಅಂಧ ನೌಕರರಿಗೆ ಪ್ರತ್ಯೇಕ ಸುತ್ತೋಲೆ ಹೊರಡಿಸಿ ಶೇ. 50 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದೆ.