ಬೆಂಗಳೂರು: 6ನೇ ತರಗತಿಯಿಂದ 10 ರ ವರೆಗಿನ ಉನ್ನತ ತರಗತಿಗಳಲ್ಲಿ ಆನ್‌ಲೈನ್ ಶಿಕ್ಷಣದ ಸಾಧಕ, ಬಾಧಕಗಳ ಕುರಿತು ಚರ್ಚಿಸಿ ಮತ್ತು ಆ ಕುರಿತಂತೆ ಮಾರ್ಗಸೂಚಿಗಳನ್ನು ರೂಪಿಸಲು ಹಿರಿಯ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಲ್‌ಕೆಜಿಯಿಂದ ಐದನೇ ತರಗತಿವರೆಗೆ ಆನ್‌ಲೈನ್ ಹೊರತುಪಡಿಸಿ ತಂತ್ರಜ್ಞಾನಾಧಾರಿತವಾದ ಬೋಧನೆಯನ್ನು ಅಳವಡಿಸಿಕೊಳ್ಳುವ ಕುರಿತಂತೆ ಸಹ ಈ ಸಮಿತಿ ಸಾಧಕ,ಬಾಧಕಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲಿದೆ. ಸಮಿತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಪ್ರೊ. ಎಂ.ಕೆ. ಶ್ರೀಧರ್ , ಹಿರಿಯ ಶಿಕ್ಷಣ ತಜ್ಞರಾದ ಪ್ರೊ.ಗುರುರಾಜ ಕರ್ಜಗಿ, ಡಾ.ವಿ.ಪಿ. ನಿರಂಜನಾರಾಧ್ಯ, ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಪ್ರತಿನಿಧಿಗಳಾದ ಹೃಷಿಕೇಶ್, ನಿಮಾನ್ಸ್ ಸಂಸ್ಥೆಯ ಮಕ್ಕಳ ಮಾನಸಿಕ ತಜ್ಞರು, ಅರ್ಲಿ ಚೈಲ್ಡ್ ಹುಡ್ ಸಂಘಟನೆಯ ಪ್ರತಿನಿಧಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇರುತ್ತಾರೆ.
ಹತ್ತು ದಿನಗಳಲ್ಲಿ ಮಾರ್ಗಸೂಚಿ ರೂಪಿಸಿಲು ಸೂಚನೆ :
- ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಯಾವ ರೀತಿ ಬಳಸಿಕೊಳ್ಳಬೇಕು
- ತರಗತಿ ಇಲ್ಲದಿರುವಾಗ ಮಕ್ಕಳ ಶಿಕ್ಷಣ ನಿರಂತರತೆಗೆ ಮಾತ್ರ ಇದನ್ನು, ಎಷ್ಟು ಬಳಕೆ ಮಾಡಬೇಕು
- ರಜಾ ಅವಧಿಯಲ್ಲಿ ಮಕ್ಕಳ ಜ್ಞಾನಾರ್ಜನೆಗೆ ಪೂರಕವಾಗಿ ಹೇಗೆ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು
- ಕೋವಿಡ್‌ನಂತಹ ಸಂದರ್ಭದಲ್ಲಿ ಸಾಂಪ್ರದಾಯಿಕ ತರಗತಿಗಳಿಗೆ ಪರ್ಯಾಯವೆನ್ನುವ ಭಾವನೆಯನ್ನು ಮೂಡಿಸದೇ ಅವರ ಕಲಿಕೆಗೆ ಪ್ರೇರೇಪಣೆಯಾಗುವಂತೆ ಮಾತ್ರವೇ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು
- ವಿಶೇಷವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿ/ ಪೋಷಕರ ಸಾಮಾಜಿಕ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ವಿದ್ಯಾರ್ಥಿ ಕಲಿಕೆಯಿಂದ ವಂಚಿತವಾಗದೇ ಮುಖ್ಯವಾಹಿನಿಯಲ್ಲಿ ಒಳಗೊಳ್ಳುವುದು ಸೇರಿದಂತೆ ಈ ಪರ್ಯಾಯ ಬೋಧನಾ ಕ್ರಮದ ಸಾಧಕ ಬಾಧಕಗಳೊಂದಿಗೆ ಮಾರ್ಗಸೂಚಿಗಳನ್ನು ರೂಪಿಸಿ ಈ ಸಮಿತಿಯು 10 ದಿನಗಳಲ್ಲಿ ವರದಿ ನೀಡಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಓದಿ : ರಾಜ್ಯದಲ್ಲಿ LKG-UKG ಸೇರಿ 1ರಿಂದ 5ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣ ರದ್ದು!
ಶುಲ್ಕ ಹೆಚ್ಚಳದ ವಿರುದ್ಧ ಕ್ರಮ:
ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ಸಾಲಿಗೆ ಬೋಧನಾ ಶುಲ್ಕ ಹೆಚ್ಚಳ ಮಾಡಬಾರದು ಎಂದು ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟವಾದ ಸುತ್ತೋಲೆ ಹೊರಡಿಸಿದ್ದು, ಇದನ್ನು ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಲು ಇಲಾಖಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.